ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಖ್ಯಾತ ನಟ ಮೋಹನ್ ಬಾಬು ನಿರ್ಮಾಣದ, ಮುಖೇಶ್ ಕುಮಾರ್ ಸಿಂಗ್ ನಿರ್ದೇಶನದ, ವಿಷ್ಣು ಮಂಚು ಮುಖ್ಯಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ “ಕಣ್ಣಪ್ಪ” ಚಿತ್ರದ “ಶಿವಶಿವ ಶಂಕರ” ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.

ಆರ್ಟ್ ಆಫ್ ಲಿವಿಂಗ್ನ ಶ್ರೀ ರವಿಶಂಕರ್ ಗುರೂಜಿ ಈ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ಮೋಹನ್ ಬಾಬು, ವಿಷ್ಣು ಮಂಚು, ನಿರ್ದೇಶಕ ಮುಖೇಶ್ ಕುಮಾರ್ ಸಿಂಗ್ ಮುಂತಾದ ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಭಾರತಿ ವಿಷ್ಣುವರ್ಧನ್, ಶ್ರೀಮತಿ ಸುಮಲತ ಅಂಬರೀಶ್ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿದ್ದರು.

ನನಗೆ “ಕಣ್ಣಪ್ಪ ಅಂದಕೂಡಲೆ ನೆನಪಿಗೆ ಬರುವುದು ಡಾ||ರಾಜಕುಮಾರ್ ಅವರು ಎಂದು ಮಾತು ಆರಂಭಿಸಿದ ನಟ, ನಿರ್ಮಾಪಕ ಮೋಹನ್ ಬಾಬು, ಇಂದು ಶ್ರೀರವಿಶಂಕರ್ ಗುರೂಜಿ ಅವರು ನನ್ನ ಮಗ ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಆಶೀರ್ವದಿಸಿದ್ದಾರೆ. ಅವರಿಗೆ ಅನಂತ ಧನ್ಯವಾದ. ಇನ್ನು, ನನ್ನ ಆತ್ಮೀಯ ಗೆಳೆಯರಾದ ವಿಷ್ಣುವರ್ಧನ್ ಹಾಗು ಅಂಬರೀಶ್ ಅವರ ಪತ್ನಿಯರಾದ ಭಾರತಿ ವಿಷ್ಣುವರ್ಧನ್ ಹಾಗೂ ಸುಮಲತ ಅಂಬರೀಶ್ ಅವರು ಬಂದಿರುವುದು ಬಹಳ ಖುಷಿಯಾಗಿದೆ. ರಾಕ್ ಲೈನ್ ವೆಂಕಟೇಶ್ ಅವರು ಕರ್ನಾಟಕದಲ್ಲಿ “ಕಣ್ಣಪ್ಪ” ಚಿತ್ರದ ವಿತರಣೆ ಹಕ್ಕನ್ನು ಪಡೆದುಕೊಂಡಿದ್ದಾರೆ. ಭಾರತೀಯ ಚಿತ್ರರಂಗದ ಪ್ರಸಿದ್ಧ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ನಮ್ಮ ಚಿತ್ರದ “ಶಿವಶಿವ ಶಂಕರ” ಹಾಡು ಬಿಡುಗಡೆಯಾಗಿದೆ. ಹಾಡು ಬಿಡುಗಡೆ ಮಾಡಿಕೊಟ್ಟ ಗುರೂಜಿ ಅವರಿಗೆ, ಭಾರತಿ ವಿಷ್ಣುವರ್ಧನ್, ಸುಮಲತ ಅಂಬರೀಶ್ ಹಾಗೂ ರಾಕ್ ಲೈನ್ ವೆಂಕಟೇಶ್ ಅವರಿಗೆ ಧನ್ಯವಾದ. ನಮ್ಮ ಚಿತ್ರ ಏಪ್ರಿಲ್ 25ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಎಲ್ಲರು ನೋಡಿ ಪ್ರೋತ್ಸಾಹ ನೀಡಿ ಎಂದು ನಟ ವಿಷ್ಣು ಮಂಚು ಮಾತನಾಡಿದ್ದಾರೆ.

“ಕಣ್ಣಪ್ಪ” ಚಿತ್ರವನ್ನು ನಾನು ಈಗಾಗಲೇ ನೋಡಿದ್ದೇನೆ. ಬಹಳ ಚೆನ್ನಾಗಿದೆ. ಈ ಚಿತ್ರವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ಸಂತೋಷವಾಗುತ್ತಿದೆ ಎಂದು ಕರ್ನಾಟಕದ ವಿತರಣೆ ಹಕ್ಕು ಪಡೆದುಕೊಂಡಿರುವ ರಾಕ್ ಲೈನ್ ವೆಂಕಟೇಶ್ ತಿಳಿಸಿದ್ದಾರೆ.
