ಬೆಂಗಳೂರು : ರಾಜ್ಯದಲ್ಲಿ ಇತ್ತೀಚೆಗೆ ತಾಪಮಾನ ಭಾರೀ ಏರಿಕೆಯಾಗುತ್ತಿದೆ. ದಿನೇ ದಿನೇ ಬಿಸಿಲಿನ ತಾಪ ಏರಿಕೆಯಾಗುತ್ತಿದ್ದಂತೆ ಜನರಿಗೆ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳುವಂತೆ ಇಲಾಖೆ ಸೂಚನೆಗಳನ್ನು ನೀಡುತ್ತಿದೆ.
ಇನ್ನು ಮೊನ್ನೆಯಷ್ಟೇ ಹವಾಮಾನ ಇಲಾಖೆ ಮುಂದಿನ ಎರಡು ದಿನ ಕರ್ನಾಟಕ ಸೇರಿ ಇತರೆ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು. ಅದೇ ರೀತಿ ನಿನ್ನೆ ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗಿದೆ. ಈ ಮೂಲಕ ಕರ್ನಾಟಕಕ್ಕೂ ಪೂರ್ವ ಮುಂಗಾರಿನ ಆಗಮನವಾಗಿದ್ದು, ಸುಡು ಬಿಸಿಲಿನಿಂದ ಹೈರಾಣಾಗಿದ್ದ ಜನತೆಗೆ ವರುಣರಾಯ ತಂಪೆರೆದಿದ್ದಾನೆ.
ಮುಂದಿನ 2 ದಿನವೂ (ಮಾರ್ಚ್ 13, 14ರವರೆge) ಬೆಂಗಳೂರು, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ : ದಕ್ಷಿಣ ಒಳನಾಡಿನ ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಮತ್ತು ಹಾಸನ ಹಾಗೂ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳನ್ನು ಬಿಟ್ಟು ಉಳಿದ ಜಿಲ್ಲೆಗಳಲ್ಲಿ ತಾಪಮಾನ ಪರಿಸ್ಥಿತಿ ಯಥಾಸ್ಥಿತಿಯಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ಮಳೆಯ ಮುನ್ಸೂಚನೆಯ ಹೊರತಾಗಿಯೂ, ತಾಪಮಾನವು ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಬೆಂಗಳೂರು ನಗರದಲ್ಲಿ, ಮಾರ್ಚ್ 11ರಂದು ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34° C ಮತ್ತು 20 ° C ಆಸುಪಾಸಿನಲ್ಲಿತ್ತು. ಕರಾವಳಿ ಜಿಲ್ಲೆಗಳು ಬಿಸಿ ಮತ್ತು ಆರ್ದ್ರ ಪರಿಸ್ಥಿತಿಗಳು ಹಾಗೇ ಮುಂದುವರೆಯಲಿದೆ ಎಂದು IMD ವರದಿಯಲ್ಲಿ ತಿಳಿಸಿದೆ.
