ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿದ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಕಾರಿನ ಮೇಲೆ ಮಗುಚಿ ಬಿದ್ದಿರುವ ದುರ್ಘಟನೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದ ರಸ್ತೆಯಲ್ಲಿ ಸಂಭವಿಸಿದೆ.

ಇಂದು ಬೆಳಿಗ್ಗೆ ಈ ದುರ್ಘಟನೆ ನಡೆದಿದ್ದು, ಕಾರಿನಲ್ಲಿದ್ದ 2 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ಕಾಂಕ್ರೀಟ್ ಮಿಕ್ಸರ್ ಲಾರಿ ವೇಗವಾಗಿ ಚಲಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿಬಿದ್ದಿದೆ.

ಕಾಂಕ್ರೀಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಸಂಪೂರ್ಣ ಅಪ್ಪಚ್ಚಿಯಾಗಿದ್ದು, ಕೂಡಲೇ ಸಾರ್ವಜನಿಕರು ಹಾಗೂ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ.

ಕಾರು ಅಪ್ಪಚ್ಚಿಯಾಗಿದ್ದರಿಂದ ಮನುಷ್ಯರ ಕೈಯಿಂದ ಕಾರ್ಯಚರಣೆ ನಡೆಸುವುದು ಕಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ಕ್ರೇನ್ಗಳನ್ನು ಸ್ಥಳಕ್ಕೆ ಕರೆಯಿಸಿ ಅದರ ಮೂಲಕ ಕಾರಿನ ಪಾರ್ಟ್ಸ್ಗಳನ್ನು ಬಿಡಿ ಬಿಡಿ ಮಾಡಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.


ಇತ್ತೀಚೆಗಷ್ಟೇ ಬೆಂಗಳೂರಿನ ಹೊರವಲಯದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಂಟೈನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದರು. ಅದೇ ರೀತಿಯಲ್ಲೇ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ ಬಳಿ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಮುಗುಚಿ ಬಿದ್ದಿದೆ.

