ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮುಂದಿನ ದಿನಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 18 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗದಲ್ಲಿ 64.5mm ನಿಂದ 115.5mm ವರೆಗೆ ಮಳೆ ದಾಖಲಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಭಾರೀ ಏರುಪೇರಾಗಲಿದೆ. ಇಂದು ಮತ್ತು ನಾಳೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ : ಇಂದು ಮಧ್ಯರಾತ್ರಿಯಿಂದ ಖಾಸಗಿ ಬಸ್ ಟಿಕೆಟ್ ದರ ಏರಿಕೆ!







