ಯಾವುದೇ ಸಂಘಟನೆ, ಪಕ್ಷದ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಿ – ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ!

ಬೆಂಗಳೂರು : ರಾಜ್ಯದ ನೂತನ ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ, ಬೆಂಗಳೂರು ನಗರದ ಕ್ರೈಂ ಹಾಗೂ ಸಂಚಾರ ದಟ್ಟಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಈ ವೇಳೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷದ ಮುಲಾಜು ನೋಡದೆ ಕಾನೂನು ಕ್ರಮ ಕೈಗೊಳ್ಳಿ. ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಸಹಿಸಬೇಡಿ, ಹೆಣ್ಣು ಮಕ್ಕಳು ಪಾರ್ಟಿ ಮಾಡಿದ್ರೆ ಅವರ ಮೇಲೆ ದಾಳಿ ಮಾಡಿದ್ರೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಹೆಣ್ಣು ಮಕ್ಕಳ ಬಟ್ಟೆ ಬಗ್ಗೆ ಮಾತಾಡುವುದನ್ನು ಸಹಿಸಬೇಡಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಪಕ್ಷ ನನಗೆ ಒಂದು ದೊಡ್ಡ ಜವಾಬ್ದಾರಿಯನ್ನು ವಹಿಸಿದೆ. ಸದ್ಯ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತಿದ್ದೇನೆ. ಮಾಜಿ ಗೃಹ ಸಚಿವರಾದ ಜಿ. ಪರಮೇಶ್ವರ್ ಸಾಹೇಬ್ರ ಅವಧಿಯ ಯಾವೆಲ್ಲಾ ಜನಪರ ಕಾರ್ಯಕ್ರಮಗಳನ್ನು ಮುಂದುವರಿಸಬೇಕು ಎಂಬುದರ ಕುರಿತು ಅಧಿಕಾರಿಗಳಿಂದ ವಿವರಣೆ ಪಡೆದಿದ್ದೇನೆ ಎಂದಿದ್ದಾರೆ.

ಬೆಂಗಳೂರು ಸಿಟಿ, ಡ್ರಗ್ ಮಾಫಿಯಾ, ಮಹಿಳೆಯರ ಸುರಕ್ಷತೆ, ಟ್ರಾಫಿಕ್ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕಾನೂನು ಎಲ್ಲರಿಗೂ ಒಂದೇ. ಯಾರೇ ಆದರೂ ಕಾನೂನಿನ ಚೌಕಟ್ಟಿನಲ್ಲಿದ್ದರೆ ಯಾವುದೇ ಸಮಸ್ಯೆಯಿಲ್ಲ. ಅದನ್ನು ಮೀರಿ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳುವುದು ಖಚಿತ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ ಮತ್ತು ದ್ವೇಷ ಹುಟ್ಟಿಸುವ ಭಾಷಣಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಮಾಹಿತಿ ತಂತ್ರಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಚರ್ಚೆ ನಡೆಸುತ್ತಿದ್ದು, ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗುತ್ತಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ರೌಡಿ ಪಡೆಯನ್ನು ಬಗ್ಗೆ ಮಾತನಾಡಿ, ಈ ಬಗ್ಗೆ ಈಗಲೇ ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ರೌಡಿಸಂ ತಡೆಗೆ ಈಗಾಗಲೇ ಒಂದು ಬ್ಲೂ ಪ್ರಿಂಟ್ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಇದರ ಸಂಪೂರ್ಣ ವಿವರವನ್ನು ನೀಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ : ನಾರ್ವೆ ಚೆಸ್‌ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಗ್ರ್ಯಾಂಡ್‌ಮಾಸ್ಟರ್ ಪ್ರಜ್ಞಾನಂದ!

Btv Kannada
Author: Btv Kannada

Leave a Comment

Read More

Read More