ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಒಂದು ವಾರ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ.
ಭಾರತೀಯ ಹವಾಮಾನ ಇಲಾಖೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಿಗೆ ಭಾರೀ ಮಳೆ, ಗುಡುಗು-ಮಿಂಚು ಮತ್ತು ಬಲವಾದ ಗಾಳಿಯ ಎಚ್ಚರಿಕೆ ನೀಡಿದೆ.
ಐಎಂಡಿಯ ಏಳು ದಿನಗಳ ಮುನ್ಸೂಚನೆಯ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜೂನ್ 14ರಿಂದ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗಲಿದ್ದು, ಜೂನ್ 15 ಮತ್ತು 16ರಂದು ಯಾವುದೇ ಪ್ರಮುಖ ಎಚ್ಚರಿಕೆಗಳನ್ನು ನೀಡಿಲ್ಲ. ಉತ್ತರ ಒಳನಾಡು ಕರ್ನಾಟಕದಲ್ಲಿ ಈ ವಾರ ಗುಡುಗು, ಮಿಂಚು, ಬಿರುಗಾಳಿ ಮತ್ತು ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾವೇರಿ, ಧಾರವಾಡ, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು, ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಹಾವೇರಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಇದನ್ನೂ ಓದಿ : ಸಿಂಪಲ್ ಸುನಿ ನಿರ್ದೇಶನದ “ಲಂಬೋದರ 2.0” ಚಿತ್ರಕ್ಕೆ ಅಂತರರಾಷ್ಟ್ರೀಯ ಬೇಡಿಕೆ!









