ಬೆಂಗಳೂರು : ರಾಜ್ಯ ಸರ್ಕಾರದ ಎರಡು ಪ್ರಮುಖ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಫಲಾನುಭವಿಗಳ ಪಟ್ಟಿಯಲ್ಲಿ ಮೃತರು ಹಾಗೂ ಅನರ್ಹರು ಪತ್ತೆಯಾಗಿರುವುದರಿಂದ ಕೋಟ್ಯಂತರ ರೂಪಾಯಿ ದುರುಪಯೋಗವಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ಸುಮಾರು 100 ಕೋಟಿ ರೂಪಾಯಿ ಮೃತ ಫಲಾನುಭವಿಗಳ ಖಾತೆಗಳಿಗೆ ಹೋಗಿದೆ. ಕೆಲವರು ಬೇರೆ ವ್ಯಕ್ತಿಗಳ ಮೊಬೈಲ್ ಸಂಖ್ಯೆಯನ್ನು ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಸಿಕ್ಕ ನಂತರ ನಾವು ತನಿಖೆ ನಡೆಸಿದ್ದೇವೆ. ಆದ್ದರಿಂದ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾರ ಯೋಜನೆಯನ್ನೂ ನಾವು ನಿಲ್ಲಿಸುವುದಿಲ್ಲ. ಆದರೆ ಹೊಸದಾಗಿ ಅರ್ಜಿ ಸಲ್ಲಿಸಬೇಕು.
ನಾವು ಯಾರನ್ನೂ ಪಟ್ಟಿಯಿಂದ ತೆಗೆದುಹಾಕಲು ಬಯಸುವುದಿಲ್ಲ. ಯಾರನ್ನೂ ತೆಗೆದುಹಾಕುವುದಿಲ್ಲ. ಆದರೆ ಫಲಾನುಭವಿಗಳು ಸರಿಯಾದ ಮಾಹಿತಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದನ್ನೂ ಓದಿ : ಜೂ.17 ರಂದು ಮೋದಿ – ಟ್ರಂಪ್ ದ್ವಿಪಕ್ಷೀಯ ಸಭೆ!









