ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಡಿಕೆಶಿ ಪೋಸ್ಟ್ ಹಂಚಿಕೊಂಡು ʼಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ! ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡʼ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.
ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ ಎಂದಿದ್ದಾರೆ.
ಇದನ್ನೂ ಓದಿ : ಓಮನ್ ಸಮುದ್ರದಲ್ಲಿ ಮಗುಚಿದ 14 ಭಾರತೀಯರಿದ್ದ ಹಡಗು!









