ಬೆಂಗಳೂರು : ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಸಮರದ ಅಬ್ಬರ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಹೀಗಾಗಿ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಇನ್ನುಳಿದ ಮುಖಂಡರು ಕ್ಷೇತ್ರ ಬಿಟ್ಟು ತೆರಳಲಿದ್ದಾರೆ.
ಇದೇ 26 ರಂದು ರಾಜ್ಯದ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮತದಾನ ಮುಕ್ತಾಯಗೊಳ್ಳುವ 48 ಗಂಟೆಗಳ ಮುಂಚೆ ಬಹಿರಂಗ ಪ್ರಚಾರ ಅಂತ್ಯಗೊಳಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಆದರೆ ಅಭ್ಯರ್ಥಿಗಳು ಮಾತ್ರ ಮನೆ ಮನೆ ಪ್ರಚಾರ ಮಾಡಬಹುದಾಗಿದೆ. ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತದಾರರ ಮನವೊಲಿಕೆಗೆ ಅಂತಿಮ ಕಸರತ್ತು ನಡೆಸಲಿದ್ದಾರೆ.
ಮೊದಲ ಹಂತದ ಚುನಾವಣಾ ಪ್ರಚಾರದಲ್ಲಿ ಅಬ್ಬರಿಸಿದ ಮುಖಂಡರು: ಮೊದಲ ಹಂತದ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್‌ನ ವರಿಷ್ಠರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಬಿರುಸಿನ ಮತ ಪ್ರಚಾರ ಕೈಗೊಂಡಿದ್ದರು.
ಎಲ್ಲೆಲ್ಲಿ ಮೊದಲ ಹಂತದ ಮತದಾನ? ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಹಂತಕ್ಕೆ ಮತದಾನ ನಡೆಯಲಿದೆ.
ಇದನ್ನೂ ಓದಿ : ಉಡುಪಿ : ಬಿಜೆಪಿ ಯುವ ಮೋರ್ಚಾದಿಂದ ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ವಾರ್..!