ಬೆಂಗಳೂರು : ಚಿಕ್ಕಬಳ್ಳಾಪುರ ಸಂಸದ ಡಾ. ಕೆ ಸುಧಾಕರ್ಗೆ ಬಿಗ್ ರಿಲೀಫ್ ಸಿಕ್ಕಿದೆ. ಕಳೆದ ಲೋಕಸಭಾ ಚುನಾವಣೆ ವೇಳೆ ಮಾದಾವರ ಬಳಿ 4.8 ಕೋಟಿ ರೂ. ಪತ್ತೆ ಕೇಸ್ ಸಂಬಂಧ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ದಾಖಲಾಗಿದ್ದ FIR ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಲೋಕಸಭಾ ಚುನಾವಣೆ ವೇಳೆ ಮಾದಾವರ ಬಳಿ 4.8 ಕೋಟಿ ರೂ. ಪತ್ತೆ ಪ್ರಕರಣ ರದ್ದು ಕೋರಿ ಡಾ.ಕೆ. ಸುಧಾಕರ್ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ ಅರುಣ್ ಪೀಠ ಡಾ.ಕೆ. ಸುಧಾಕರ್ ವಿರುದ್ಧದ FIR ರದ್ದು ಮಾಡಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ ಏನು? ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನದ ಹಿಂದಿನ ದಿನ ಚುನಾವಣಾ ಆಯೋಗದ ಅಧಿಕಾರಿಗಳು ಗೋವಿಂದಪ್ಪ ಅವರ ಮನೆಯಿಂದ 4.8 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದರು. ಈ ಹಣ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಮತದಾರರಿಗೆ ಹಂಚುವ ಉದ್ದೇಶದಿಂದ ಇರಲಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.
ಈ ವಿಚಾರವಾಗಿ ಚುನಾವಣಾ ನೀತಿ ಸಂಹಿತೆ ಜಾರಿಯ ರಾಜ್ಯ ನೋಡಲ್ ಅಧಿಕಾರಿಯಾಗಿದ್ದ ಮನೀಶ್ ಮೌದ್ಗಿಲ್ ಅವರಿಗೆ ಸುಧಾಕರ್ ಅವರು ವಾಟ್ಸಾಪ್ ಮೆಸೇಜ್ ಮಾಡಿದ್ದರು ಎನ್ನಲಾಗಿತ್ತು. ಪ್ರಕರಣದ ಕುರಿತು ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ಮಾದನಾಯಕಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್ಐಆರ್ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದ ಪೊಲೀಸರು ನೆಲಮಂಗಲ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸುಧಾಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ : ಅರಸಯ್ಯನ ಪ್ರೇಮ ಪ್ರಸಂಗ ಚಿತ್ರದ “ಪೋಸ್ಟ್ ಕಾರ್ಡ್” ಹಾಡು ಬಿಡುಗಡೆ – ಸೆ.19ಕ್ಕೆ ಸಿನಿಮಾ ತೆರೆಗೆ!







