ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿನಲ್ಲಿ ದಿನೇ ದಿನೇ ಕ್ರೈಂ ರೇಟ್ ಹೆಚ್ಚುತ್ತಿರುವ ಹಿನ್ನೆಲೆ ಬೆಂಗಳೂರು ನಗರ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ರೌಡಿಗಳ ಚಟುವಟಿಕೆಗಳ ಮೇಲೆ ನಿಗಾ ಇಡಲು ಪ್ರತಿ ಸಬ್ ಡಿವಿಷನ್ ಎಸಿಪಿಗಳ ನೇತೃತ್ವದಲ್ಲಿ ರೌಡಿಶೀಟರ್ಗಳ ಮನೆಗಳ ಮೇಲೆ ತೀವ್ರ ದಾಳಿ ನಡೆಸಲಾಗುತ್ತಿದೆ.

ಬೆಂಗಳೂರಿನಾದ್ಯಂತ ರೌಡಿಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸುತ್ತಿದ್ದು, ಪೂರ್ವ ವಿಭಾಗದ ಹಲಸೂರು, ಬಾಣಸವಾಡಿ, ಇಂದಿರಾನಗರ, ಹೆಣ್ಣೂರು, ರಾಮಮೂರ್ತಿನಗರ, ಭಾರತಿನಗರ, ಶಿವಾಜಿನಗರ ಸೇರಿದಂತೆ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಗಳ ಮನೆಗಳ ಮೇಲೆ ರೇಡ್ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಇತ್ತೀಚೆಗೆ ನಗರದಲ್ಲಿ ಸರಗಳ್ಳತನ ಮತ್ತು ಪುಡಿರೌಡಿಗಳ ಹಾವಳಿ ಹೆಚ್ಚಳವಾದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು ಹಳೆ ರೌಡಿಗಳ ಕಾರ್ಯಚಟುವಟಿಕೆಗಳ ಮೇಲೆ ನಿಗಾ ಇಟ್ಟಿದ್ದು, ದಾಳಿಯ ವೇಳೆ ರೌಡಿಗಳ ಇತ್ತೀಚಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ಯಾವುದೇ ಸುಳಿವು ಸಿಕ್ಕರೆ ಸ್ಥಳದಲ್ಲೇ ಕಾನೂನು ಕ್ರಮಕ್ಕೆ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ ಜೊತೆಗೆ, ದಾಳಿಯ ಸಂದರ್ಭದಲ್ಲಿ ಮನೆಯಲ್ಲಿ ಮಾರಣಾಂತಿಕ ಆಯುಧಗಳು ಸಿಕ್ಕರೆ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸುವ ನಿರ್ಧಾರ ಕೈಗೊಳ್ಳಲಾಗಿದೆ. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಕ್ರೈಂ ತಡೆಗಟ್ಟಲು ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆ ತೀವ್ರಗೊಂಡಿದೆ.
ಇದನ್ನೂ ಓದಿ : KMFನಿಂದ ಗ್ರಾಹಕರಿಗೆ ಗುಡ್ ನ್ಯೂಸ್.. ಸೆ.22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ!







