ಬೆಂಗಳೂರು : ಇಂದು ಮಧ್ಯಾಹ್ನ ನಿಧನರಾದ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ನಾಡಿನ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪರ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿ ಹಲವಾರು ಗಣ್ಯರು ಕಂಬನಿ ಮಿಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ಸಂದೇಶದಲ್ಲಿ, “ಡಾ. ಎಸ್.ಎಲ್. ಭೈರಪ್ಪರ ಅಗಲಿಕೆಯಿಂದ ನಾವು ನಮ್ಮ ಆತ್ಮಸಾಕ್ಷಿಯನ್ನು ತಟ್ಟಿದ, ಭಾರತದ ಆತ್ಮವನ್ನು ಆಳವಾಗಿ ಅಧ್ಯಯನ ಮಾಡಿದ ಮಹಾನ್ ಚಿಂತಕರೊಬ್ಬರನ್ನು ಕಳೆದುಕೊಂಡಿದ್ದೇವೆ. ಅವರು ನಿರ್ಭೀತ ಹಾಗೂ ಕಾಲಾತೀತ ಚಿಂತಕರಾಗಿದ್ದು, ತಮ್ಮ ಗಂಭೀರ ಮತ್ತು ಚಿಂತನಶೀಲ ಕೃತಿಗಳ ಮೂಲಕ ಕನ್ನಡ ಸಾಹಿತ್ಯವನ್ನು ಅಪಾರವಾಗಿ ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಸಮಾಜವನ್ನು ಪ್ರತಿಬಿಂಬಿಸಲು, ಪ್ರಶ್ನಿಸಲು ಮತ್ತು ಅದರೊಂದಿಗೆ ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿವೆ,” ಎಂದು ಹೇಳಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಕನ್ನಡ ಸಾರಸ್ವತ ಲೋಕದ ಹಿರಿಯ ಬರಹಗಾರರಾದ ಎಸ್.ಎಲ್.ಭೈರಪ್ಪನವರ ನಿಧನವಾರ್ತೆ ನೋವು ತಂದಿದೆ. ಭೈರಪ್ಪನವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮ ಆಪ್ತವೆನಿಸುವ ಬರಹ ಶೈಲಿಯಿಂದಾಗಿ ಅಪಾರ ಓದುಗರನ್ನು ಹೊಂದಿದ್ದ ಭೈರಪ್ಪನವರ ನಿಧನದಿಂದ ಸಾಹಿತ್ಯಲೋಕ ಬಡವಾಗಿದೆ. ಅವರ ಕುಟುಂಬವರ್ಗ ಮತ್ತು ಓದುಗ ಬಳಗಕ್ಕೆ ನನ್ನ ಸಂತಾಪಗಳು ಎಂದು ಪೋಸ್ಟ್ ಹಂಚಿಕೊಂಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್, “ಕನ್ನಡದ ಶ್ರೇಷ್ಠ ಕಾದಂಬರಿಕಾರ, ಪದ್ಮಭೂಷಣ ಪುರಸ್ಕೃತ, ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಪ್ರಶಸ್ತಿಯ ಗೌರವವನ್ನು ತಂದುಕೊಟ್ಟ ಡಾ. ಎಸ್.ಎಲ್. ಭೈರಪ್ಪನವರು ಇಂದು ವಿಧಿವಶರಾಗಿದ್ದು ಬಹಳ ನೋವು ತಂದಿದೆ. ಸಾಹಿತ್ಯಾಭಿಮಾನಿಗಳು ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, “ಪರ್ವ ಮತ್ತು ಉತ್ತರಕಾಂಡ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು” ಎಂದು ಶೋಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಪದ್ಮಭೂಷಣ ಪುರಸ್ಕೃತ, ನಾಡಿನ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ ವಿಧಿವಶ!







