ಬೆಂಗಳೂರು : ದೇಶದ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ನಿನ್ನೆ ಸಂಜೆ ಬಿರುಸಿನ ಮಳೆಯಾಗಿದೆ. ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಾಗಲಿದೆ. ಏ.10-12ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ನಿರೀಕ್ಷೆಯಿದ್ದರೆ, ಉತ್ತರ ಒಳನಾಡಿನಲ್ಲಿ ಒಣ ಹವಾಮಾನ ಇರಲಿದೆ ಎಂದು ತಿಳಿಸಿದೆ.

ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಹೆಚ್ಚಿರಲಿದೆ. ಸೆಖೆಯ ಅನುಭವ ಹೆಚ್ಚಾಗಿರಲಿದೆ. ಹೀಗಾಗಿ, ಏ.10 ರಿಂದ 12ರ ವರೆಗೆ ಈ ಭಾಗದಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದೆ.











