ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ KSRTC ಬಸ್ ಡಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!

ಹಾಸನ : ಚಾಲಕನ ನಿಯಂತ್ರಣ ತಪ್ಪಿದ ಪುತ್ತೂರು ಡಿಪೋದ ಸಾರಿಗೆ ಬಸ್ (KSRTC) ಅರಸೀಕೆರೆಯ ಗೀಜಿಹಳ್ಳಿ ಬಳಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಜಖಂಗೊಂಡಿದೆ ಈ ದುರ್ಘಟನೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, ಅದರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ತಕ್ಷಣ ಸ್ಥಳೀಯರು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆಗಾಗಿ ಗಾಯಾಳುಗಳನ್ನು ಅರಸೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಐವರು ಗಂಭೀರ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರು ಅಪಘಾತ ನಡೆದ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ. ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು. ಆದರೆ, ಜೆಸಿಬಿ ಯಂತ್ರಗಳ ಸಹಾಯದಿಂದ ಅಪಘಾತಕ್ಕೀಡಾದ ಬಸ್ಸನ್ನು ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಬಿತ್ತು ಮತ್ತೊಂದು ಹೆಣ…15-20 ಜನರಿಂದ ಯುವಕನ ಬರ್ಬರ ಹತ್ಯೆ!

Btv Kannada
Author: Btv Kannada

Read More