ದೇಶದಲ್ಲಿ ಜನರ ಕುತೂಹಲ ಕೆರಳಿಸಿದ್ದ ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ NDA ಐತಿಹಾಸಿಕ ಮತ್ತು ಭರ್ಜರಿ ಗೆಲುವು ಸಾಧಿಸುವ ಮೂಲಕ ಅಧಿಕಾರವನ್ನು ಉಳಿಸಿಕೊಂಡಿದೆ. ಇದು ಬಿಹಾರದ ಚುನಾವಣಾ ಇತಿಹಾಸದಲ್ಲಿ ದ್ವಿಶತಕದ ಗಡಿ ದಾಟಿದ ಮೊದಲ ಮೈತ್ರಿಕೂಟ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. NDA ಮೈತ್ರಿಕೂಟವು ಇತಿಹಾಸದಲ್ಲಿಯೇ ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ಬರೆದಿದೆ. ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟವು ಬರೋಬ್ಬರಿ 203 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. NDA – 203, MGB – 34, JSP – 0, OTH – 6 ಸ್ಥಾನಗಳಲ್ಲಿ ಗೆಲುವು.

ಪ್ರತಿಪಕ್ಷಗಳ ಮೈತ್ರಿಕೂಟವಾದ ಮಹಾಘಟಬಂಧನ್ (MGB) ಕೇವಲ 34 ಕ್ಷೇತ್ರಗಳಲ್ಲಷ್ಟೇ ಗೆಲುವು ಕಂಡಿದೆ. ಶತಮಾನದ ಇತಿಹಾಸವುಳ್ಳ ಕಾಂಗ್ರೆಸ್ ಪಕ್ಷವು ಬಿಹಾರದಲ್ಲಿ ಕೇವಲ 5 ಸ್ಥಾನಗಳಲ್ಲಷ್ಟೇ ಗೆಲುವು ಕಾಣುವ ಮೂಲಕ ಹೀನಾಯ ಸೋಲು ಕಂಡಿದೆ. ಬಿಹಾರದ ಚುನಾವಣಾ ಫಲಿತಾಂಶವು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನಪ್ರಿಯತೆ ಮತ್ತು ಜುಗಲ್ ಬಂದಿಗೆ ಜಯಕಾರ ಘೋಷಿಸಿದೆ. ಉತ್ತಮ ಆಡಳಿತ ಮತ್ತು ಸಾಮಾಜಿಕ ನ್ಯಾಯದ ಆಧಾರದ ಮೇಲೆ ನೀತಿಶ್ ಕುಮಾರ್ ಅವರು ಮರಳಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಖಚಿತವಾಗಿದೆ. ಬಿಹಾರದಲ್ಲಿ ಎನ್‌ಡಿಎ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದ ಜನರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ NDA ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಹಾರದ ಜನತೆಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ನಮೋ ಅವರು, 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ಐತಿಹಾಸಿಕ ಮತ್ತು ಅಪ್ರತಿಮ ಗೆಲುವಿನೊಂದಿಗೆ ಆಶೀರ್ವದಿಸಿದ್ದಕ್ಕಾಗಿ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ. ‘ಅಭಿವೃದ್ಧಿ’ ಮತ್ತು ‘ಜನಪರ ಮನೋಭಾವಕ್ಕೆ’ ಸಿಕ್ಕ ಜಯವಾಗಿದೆ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ. ಈ ಚುನಾವಣೆಯಲ್ಲಿ ‘ಸಾಮಾಜಿಕ ನ್ಯಾಯ’ ಗೆದ್ದಿದೆ ಎಂದು ಸಂತಸ ಹಂಚಿಕೊಂಡ ಅವರು, ಬಿಹಾರದ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

ಬಿಹಾರದ ಜನರಿಗೆ ಸೇವೆ ಸಲ್ಲಿಸಲು ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಇದು ಬಿಹಾರಕ್ಕಾಗಿ ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡಲು ನಮಗೆ ಹೊಸ ಶಕ್ತಿಯನ್ನು ನೀಡುತ್ತದೆ, ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ (X) ನಲ್ಲಿ ಪೋಸ್ಟ್ ಮಾಡಿ ಸಂತಸ ವ್ಯಕ್ತಪಡಿಸಿದರು.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ KSRTC ಬಸ್ ಡಿಕ್ಕಿ – 10ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ!







