ಬೆಂಗಳೂರು : ಮುಡಾ ಅಸ್ತ್ರ ಹಿಡಿದ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಭೋವಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ವಿಶ್ವೇಶ್ವರಯ್ಯ ಟವರ್ನಲ್ಲಿರುವ ನಿಗಮದ ಕಚೇರಿ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ದಾಳಿ ನಡೆಸಿ ಸತತ 3 ಗಂಟೆ ಕಾಲ ದಾಖಲೆಗಳನ್ನು ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಕೊಂಡೊಯ್ದಿದ್ದಾರೆ.
ಹಗರಣದ ಹಿನ್ನೆಲೆ : 2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 60 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿದೆ.
ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಪಿ.ಡಿ ಸುಬ್ಬಪ್ಪ, ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾ., ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು.
ಕೆಲ ದಿನಗಳ ಹಿಂದೆಯಷ್ಟೇ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಪಿ.ಡಿ ಸುಬ್ಬಪ್ಪನನ್ನ ಬಂಧಿಸಿದ್ದರು. ನಿಗಮದ ಎಂಡಿ ನಾಗರಾಜಪ್ಪ, ವ್ಯವಸ್ಥಾಪಕಿ ಲೀಲಾವತಿ ಹಾಗೂ 20ಕ್ಕೂ ಹೆಚ್ಚು ಮಧ್ಯವರ್ತಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರು : ಪ್ರೇಮ ವೈಫಲ್ಯಕ್ಕೆ ಮನನೊಂದ ಯುವತಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ..!