ಬೆಂಗಳೂರು : ಇಂದು ದೇಶದ 78ನೇ ಸ್ವಾತಂತ್ರ್ಯೋತ್ಸವವನ್ನು ಭಾರತದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮವನ್ನು ಇಂದು ಬೆಂಗಳೂರಿನ ಮಾಣೆಕ್ ಷಾ ಪರೇಡ್ ಗ್ರೌಂಡ್ನಲ್ಲೂ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 9 ಗಂಟೆಗೆ ಮಾಣೆಕ್ ಷಾ ಪರೇಡ್ ಗ್ರೌಂಡ್ನಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಬಳಿಕ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರನ್ನು ಮೆರೆಯಲಾಗದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಬಲಿದಾನಕ್ಕೆ ಬೆಲೆಕಟ್ಟಲಾಗದು ಎಂದು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದ್ದಾರೆ.
ಮಾಣೆಕ್ ಷಾ ಪರೇಡ್ ಮೈದಾನಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ತೆರೆದ ಜೀಪಿನಲ್ಲಿ ಪರಿವೀಕ್ಷಣೆ ಮಾಡಿದರು. ಪೋಡಿಯಂ ಮೇಲಿದ್ದ ಬುಲೆಟ್ ಪ್ರೂಫ್ ತೆರವು ಮಾಡಲು ಸಿಎಂ ಸೂಚಿಸಿದ್ದು, ಸಿಎಂ ಸೂಚನೆ ಮೇರೆಗೆ ಬುಲೆಟ್ ಪ್ರೂಫ್ ತೆರವು ಮಾಡಲಾಗಿದೆ.
ಇನ್ನು ಮಾಣೆಕ್ ಷಾ ಪರೇಡ್ ಮೈದಾನದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ವೇಳೆ ಇದೇ ಮೊದಲ ಬಾರಿಗೆ ಸರ್ಕಾರದ ಐದು ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಕುರಿತು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯ ಎನ್ ಎನ್ ಎಸ್ ಕೋಶ ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. 400 ವಿದ್ಯಾರ್ಥಿಗಳಿಂದ ಒಟ್ಟು 8 ನಿಮಿಷದ ಕಾರ್ಯಕ್ರಮ ಇರಲಿದ್ದು, ಪರೇಡ್ನ 1ನೇ ಕಮಾಂಡರ್ ಆಗಿ ಸಿಎಆರ್ ಪಶ್ಚಿಮ ವಿಭಾಗದ ಡಿಸಿಪಿ ಗೋಪಾಲ ರೆಡ್ಡಿ ಮುಂದಾಳತ್ವ ವಹಿಸಿದ್ದಾರೆ.
ಇದನ್ನೂ ಓದಿ : ಕೆಂಪುಕೋಟೆಯಲ್ಲಿ ಸ್ವಾತಂತ್ರೋತ್ಸವದ ಸಂಭ್ರಮ – ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ..!