ಬೆಂಗಳೂರು : ಮುಡಾದ 14 ಸೈಟ್ ವಿಚಾರವೇ ಇದೀಗ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡಿದೆ. ರಾಜ್ಯಪಾಲರು ಸಿಎಂ ವಿರುದ್ಧ ತನಿಖೆಗೆ ಆದೇಶ ನೀಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ತಳಮಳ ಸೃಷ್ಟಿಯಾಗಿದೆ.
ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ-ಜೆಡಿಎಸ್ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಬೆಳಗ್ಗೆ 11.30ಕ್ಕೆ ವಿಧಾನಸೌಧದಲ್ಲಿರೋ ಗಾಂಧಿ ಪ್ರತಿಮೆ ಬಳಿ ಪ್ರೊಟೆಸ್ಟ್ ನಡೆಯಲಿದೆ. ಸರ್ಕಾರ ಹಾಗೂ ಸಿಎಂ ವಿರುದ್ಧದ ಹೋರಾಟಕ್ಕೆ ಜೆಡಿಎಸ್ ನಾಯಕರು ಸಾಥ್ ನೀಡಲಿದ್ದು, ಈ ಹೋರಾಟದಲ್ಲಿ ಬಿಜೆಪಿ-ಜೆಡಿಎಸ್‌ನ ಹಾಲಿ-ಮಾಜಿ ಸಂಸದರು, ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ.
ಮುಡಾ ವಿಚಾರದಲ್ಲಿ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನೀಡಿರೋ ಹಿನ್ನೆಲೆ, ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಪ್ರೊಟೆಸ್ಟ್ ನಡೆಸಲಾಗುತ್ತಿದೆ. ಬಿಎಸ್‌ವೈ ವಿರುದ್ಧ ಪ್ರಾಸಿಕ್ಯೂಷನ್ ಕೊಟ್ಟಾಗ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ರು, ಈಗ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಆದೇಶ ಆಗಿದೆ ಅದರಿಂದ ರಾಜೀನಾಮೆ ನೀಡಬೇಕೆಂಬುದು ಬಿಜೆಪಿ ಆಗ್ರಹಿಸಿದೆ. ಪ್ರಾಸಿಕ್ಯೂಷನ್ ನಡೆಸಿ ಕ್ಲಿನ್ ಚೀಟ್ ಬಂದ್ರೆ ಮತ್ತೆ ಸಿಎಂ ಆಗಲಿ ಎಂಬುದು NDA ನಾಯಕರ ವಾದವಾಗಿದೆ.
ಒಂದೆಡೆ ಪ್ರಾಸಿಕ್ಯೂಷನ್ ನೀಡಿರುವುದಕ್ಕೆ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಯುತ್ತಿದ್ದರೆ, ಇನ್ನೊಂದು ಕಡೆ ಸಿಎಂ ರಾಜೀನಾಮೆ ನೀಡಬೇಕು ಎಂದು NDA ಮೈತ್ರಿ ಕೂಟ ಪ್ರೊಟೆಸ್ಟ್ ನಡೆಸುತ್ತಿದೆ. ಆದ್ರೆ ಯಾವುದೇ ಕಾರಣಕ್ಕೂ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿ ರಾಜ್ಯಪಾಲರ ಆದೇಶದ ವಿರುದ್ಧ ಕಾನೂನು ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಈ ಎಲ್ಲಾ ವಿಚಾರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.
ಇದನ್ನೂ ಓದಿ : ನಿಮ್ಮವರೇ ನಿಮ್ಮನ್ನ ಇಳಿಸುವ ಪ್ರಯತ್ನ ಮಾಡಿದ್ದಾರೆ – ಬಿಗ್ ಬಾಂಬ್ ಸಿಡಿಸಿದ ಹೆಚ್ಡಿಕೆ..!