ಬೆಂಗಳೂರು : ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಲು ನಿರ್ಧರಿಸಿದ್ದಾಗಿದೆ. ಹೀಗಾಗಿ ಕಾನೂನು ಸಮರದ ಕುರಿತು ಸಿಎಂ ಸಿದ್ದರಾಮಯ್ಯ ಹಿರಿಯ ವಕೀಲರೊಂದಿಗೆ ಸಮಾಲೋಚನೆ ನಡೆಸಿದ್ದು, ಇಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಿದ್ದಾರೆ.
ಸಿಎಂ ಸಿದ್ದು ಪರ ಸುಪ್ರೀಂಕೋರ್ಟ್ನ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಮತ್ತು ಕಪಿಲ್ ಸಿಬಲ್ ಅವರು ವಾದ ಮಂಡಿಸಲಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಸಲು ಸಿಎಂ ಪರ ವಕೀಲರು ಅಪ್ಲಿಕೇಷನ್ ರೆಡಿ ಮಾಡಿದ್ದು, ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನೆ ಮಾಡಿ ಇಂದು ವಾದ ಮಂಡಿಸಲಿದ್ದಾರೆ. ಪ್ರಾಸಿಕ್ಯೂಷನ್‌ಗೆ ಕೊಡಲು ಗೈಡ್ಲೈನ್ಗಳನ್ನೇ ಪಾಲಿಸಿಲ್ಲ, ಸಂವಿಧಾನ ಬಾಹಿರವಾಗಿ ಅನುಮತಿ ನೀಡಿದ್ದಾರೆಂದು ವಾದಕ್ಕೆ ತಯಾರಿ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ಸುಪ್ರೀಂಕೋರ್ಟ್ ಈ ಹಿಂದೆ ತೀರ್ಪು ನೀಡಿದ್ದ ಬೇರೆ ಬೇರೆ 7 ಪ್ರಕರಣಗಳನ್ನ ಉಲ್ಲೇಖಿಸಿ, ಪ್ರಾಸಿಕ್ಯೂಷನ್‌ಗೆ ನೀಡುವ ನಿಯಮ ಇದಲ್ಲ ಎಂದು ಹೈಕೋರ್ಟ್‌ನಲ್ಲಿ ಕಾನೂನು ಯುದ್ಧ ನಡೆಸಲಿದ್ದಾರೆ.
ಇನ್ನು ಡಿಜಿ-ಐಜಿಪಿ ಮಟ್ಟದ ಅಧಿಕಾರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಬೇಕು. ಅನುಮತಿ ಕೇಳಲು ತನಿಖಾ ವರದಿ ಇರಬೇಕು. ಆದರೆ ಇಲ್ಲಿ ತನಿಖಾ ವರದಿಯೂ ಇಲ್ಲ, ಅಧಿಕಾರಿಗಳೂ ಇಲ್ಲ. ಖಾಸಗಿ ವ್ಯಕ್ತಿಗಳ ದೂರಿನನ್ವಯ ಪ್ರಾಸಿಕ್ಯೂಷನ್‌ಗೆ ನೀಡಿದ್ದಾರೆ. ರಾಜ್ಯಪಾಲರೇ ತನಿಖಾಧಿಕಾರಿಯಂತೆ ವರ್ತಿಸಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಲು ಸಿದ್ಧತೆ ನಡೆಸಿದ್ದಾರೆ.
ಸದ್ಯ ರಾಜ್ಯದಲ್ಲಿ ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಭಾರಿ ಕೂತುಹಲಕ್ಕೆ ಕಾರಣವಾಗಿದೆ. ಇಂದು ಹೈಕೋರ್ಟ್‌ನಲ್ಲಿ ಹೈವೋಲ್ಟೇಜ್ ವಾದ-ಪ್ರತಿವಾದ ನಡೆಯಲಿದ್ದು, ಹಾಗಾಗಿ ಹೈಕೋರ್ಟ್ನತ್ತವೇ ಇಡೀ ರಾಜ್ಯ ರಾಜಕಾರಣದ ಚಿತ್ತ ನೆಟ್ಟಿದೆ. ಅದರಂತೆ ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ವಿಚಾರದಲ್ಲಿ ಕಾಂಗ್ರೆಸ್-ಬಿಜೆಪಿ ನಾಯಕರ ನಡುವೆ ಜಟಾಪಟಿ ಮುಂದುವರಿದಿದೆ.
ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ-ಜೆಡಿಎಸ್ ಪ್ರತಿಭಟನೆ..!