ರಾಜ್ಯದಲ್ಲಿ 7 ದಿನಗಳ ಕಾಲ ಮಳೆ ಅಬ್ಬರ – 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ಬೆಂಗಳೂರು ಸೇರಿದಂತೆ ಇಂದು ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಅಲ್ಲಲ್ಲಿ ಗುಡುಗು, ಸಿಡಿಲು ಹಾಗೂ ಭಾರೀ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಹಾಸನ, ಕೊಡಗು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಆಲಿಕಲ್ಲು ಮಳೆಯಾಗಲಿದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮೇ 12ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರೀ ಮಳೆಯೂ ಸುರಿಯಬಹುದೆಂದು ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದಲ್ಲಿ ಒಣ ಹಾಗೂ ಬಿಸಿಲಿನ ವಾತಾವರಣ ಮುಂದುವರಿದರೂ ಮಧ್ಯಾಹ್ನದ ಬಳಿಕ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ. ಇದರ ಪರಿಣಾಮವಾಗಿ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶುಷ್ಕ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಹಾಸನ, ಮಂಡ್ಯ, ಮೈಸೂರು ಮತ್ತು ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ಬಿರುಗಾಳಿಯೊಂದಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ, ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉಳಿದೆಡೆ ಒಳಹವೆಯಿರಲಿದೆ.

ಮೇ 7 ಮತ್ತು 8 ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಇವುಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲಾ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಎಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಯಿದೆ. ಈ ಆರು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರೆಲ್ಲಾ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಇದನ್ನೂ ಓದಿ : ಚಿನ್ನ-ಬೆಳ್ಳಿ ದರ ಮತ್ತೆ ಏರಿಕೆ – ಇಂದಿನ ಬೆಲೆ ಎಷ್ಟು?

Btv Kannada
Author: Btv Kannada

Leave a Comment

Read More