ಬೆಂಗಳೂರು : ಸಚಿವ ಡಿ. ಸುಧಾಕರ್ ನಿಧನಕ್ಕೆ ರಾಜ್ಯ ಸರ್ಕಾರ ತೀವ್ರ ಸಂತಾಪ ಸೂಚಿಸಿದೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಿಸಲಾಗಿದೆ.
ಸರ್ಕಾರದ ಆದೇಶದಂತೆ ನಾಳೆ ಚಿತ್ರದುರ್ಗ ಜಿಲ್ಲೆಯ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ಸೇರಿದಂತೆ) ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಲಾಗಿದೆ.
ಮೇ 10 ರಿಂದ 12 ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುತ್ತಿದ್ದು, ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯಮಿತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ.
ನಾಳೆ ಚಳ್ಳಕೆರೆಯಲ್ಲಿ ಸಂಜೆ 4.00 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆ ನಡೆಯಲಿದೆ.
ಇದನ್ನೂ ಓದಿ : ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಪತ್ತೆ – ಓರ್ವ ವಶಕ್ಕೆ!








