ಉತ್ತರ ಪ್ರದೇಶದಲ್ಲಿ ಭಾರೀ ಮಳೆಗೆ 74 ಮಂದಿ ಸಾವು – ಮೃತರ ಕುಟುಂಬಗಳಿಗೆ 24 ಗಂಟೆಯೊಳಗೆ ಪರಿಹಾರ ನೀಡಲು ಸಿಎಂ ಯೋಗಿ ಆದೇಶ!

ಲಕ್ನೋ : ಉತ್ತರ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ 74 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಈ ಘಟನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಗಳಿಗೆ ತಕ್ಷಣ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಾನವ ಜೀವಹಾನಿ, ಜಾನುವಾರುಗಳ ಸಾವು ಹಾಗೂ ಬೆಳೆ ನಷ್ಟದ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸಿ ಮುಂದಿನ 24 ಗಂಟೆಗಳೊಳಗೆ ಪರಿಹಾರ ಹಣ ವಿತರಿಸಬೇಕು ಎಂದು ಅವರು ಆದೇಶಿಸಿದ್ದಾರೆ.

“ಸಂತ್ರಸ್ತ ಕುಟುಂಬಗಳೊಂದಿಗೆ ಹಿರಿಯ ಅಧಿಕಾರಿಗಳು ನೇರ ಸಂಪರ್ಕದಲ್ಲಿರಬೇಕು. ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ” ಎಂದು ಯೋಗಿ ಆದಿತ್ಯನಾಥ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದೀಗ ರಾಜ್ಯದ ಪರಿಹಾರ ಆಯುಕ್ತರ ಕಚೇರಿ ಹಗಲಿರುಳು ಕಾರ್ಯಾಚರಣೆ ನಡೆಸುತ್ತಿದ್ದು, ಪರಿಹಾರ ಕಾರ್ಯಗಳಲ್ಲಿ ಯಾವುದೇ ಅಡೆತಡೆ ಆಗದಂತೆ ನೋಡಿಕೊಳ್ಳಲಾಗುತ್ತಿದೆ. ಹಲವೆಡೆ ಮರಗಳು ಉರುಳಿದ್ದು, ವಿದ್ಯುತ್ ಕಂಬಗಳು ಹಾಗೂ ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜ್ಯದ ವಿವಿಧ ತಾಲೂಕುಗಳಲ್ಲಿ ಉಪವಿಭಾಗೀಯ ನ್ಯಾಯಾಧೀಶರು, ತಹಶೀಲ್ದಾರ್‌ಗಳು, ಪೊಲೀಸರು ಹಾಗೂ ಜಿಲ್ಲಾ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪರಿಹಾರ ಕಾರ್ಯ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಪ್ರೀತಿಗೆ ಪೋಷಕರ ವಿರೋಧ – ಮನನೊಂದು ಯುವಕ ಆತ್ಮಹತ್ಯೆ!

Btv Kannada
Author: Btv Kannada

Leave a Comment

Read More