ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಗುರುಪ್ರಸಾದ್ (52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಹಾಗೂ ಎದ್ದೇಳು ಮಂಜುನಾಥ ಸಿನಿಮಾ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಗುರುಪ್ರಸಾದ್ ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು..
ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಟಾಟಾ ನ್ಯೂ ಹಾವೆಲ್ ಅಪಾರ್ಟ್ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿಂದಲೂ ಗುರುಪ್ರಸಾದ್ ವಾಸವಿದ್ದರು. ಇದೀಗ ಅದೇ ಮನೆಯಲ್ಲಿ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಬಗ್ಗಿ ನೋಡಿದಾಗ ಗುರುಪ್ರಸಾದ್ ಶವ ಫ್ಯಾನಿಗೆ ನೇತಾಡುತ್ತಿರುವುದು ಕಂಡಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.
ಗುರುಪ್ರಸಾದ್ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರು. 2006ರಲ್ಲಿ ‘ಮಠ’ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಗುರುಪ್ರಸಾದ್, ಮೊದಲ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದರು. ಅದಾದ ಬಳಿಕ ನಿರ್ದೇಶಿಸಿದ ‘ಎದ್ದೇಳು ಮಂಜುನಾಥ’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ನಂತರ ‘ಡೈರೆಕ್ಟರ್ಸ್ ಸ್ಪೆಷಲ್’ ಸಿನಿಮಾ ಮಾಡಿದರು. ಈ ಸಿನಿಮಾ ಮೂಲಕ ಡಾಲಿ ಧನಂಜಯ್ ನಾಯಕನಾಗಿ ಪರಿಚಯಗೊಂಡರು. 2017ರಲ್ಲಿ ‘ಎರಡನೇ ಸಲ’ ಸಿನಿಮಾ ನಿರ್ದೇಶಿಸಿದರು. ಆ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು.
‘ಎರಡನೇ ಸಲ’ ಸಿನಿಮಾ ಆದಮೇಲೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದ ಗುರುಪ್ರಸಾದ್ ಇದೇ ವರ್ಷದಲ್ಲಿ ಜಗ್ಗೇಶ್ ಅವರೊಟ್ಟಿಗೆ ‘ರಂಗನಾಯಕ’ ಸಿನಿಮಾ ಮಾಡಿದರು. ಸಿನಿಮಾ ಚಿತ್ರಮಂದಿರದಲ್ಲಿ ಫ್ಲಾಪ್ ಆಗಿತ್ತು. ‘ರಂಗನಾಯಕ’ ಸಿನಿಮಾದ ಸೋಲಿನಿಂದ ವಿಚಲಿತರಾಗಿದ್ದ ಗುರುಪ್ರಸಾದ್ ಸಾಕಷ್ಟು ಸಾಲಗಳಿಗೆ ಸಿಲುಕಿಕೊಂಡಿದ್ದರು. ರಿಯಾಲಿಟಿ ಶೋ ಕಾರ್ಯಕ್ರಮದಲ್ಲೂ ಗುರುಪ್ರಸಾದ್ ಭಾಗವಹಿಸುತ್ತಿದ್ದರು.
ಇದನ್ನೂ ಓದಿ : ನಟ, ನಿರ್ದೇಶಕ ‘ಮಠ’ ಗುರುಪ್ರಸಾದ್ ಆತ್ಮಹತ್ಯೆ..!