ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದ್ದು, ಕೋಲಾರದ ವಸತಿ ಶಾಲೆಯ ಒಂಬತ್ತನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಶ್ರಾವಂತಿ, ದೀಕ್ಷಾ, ಲಾವಣ್ಯ ಮತ್ತು ವಂದನಾ ಮೃತ ವಿದ್ಯಾರ್ಥಿನಿಯರು ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋಲಾರ ವಸತಿ ಶಾಲೆ ಪ್ರಾಂಶುಪಾಲೆ ಶಶಿಕಲಾ ಸಸ್ಪೆಂಡ್ ಮಾಡಲಾಗಿದೆ. ನಿರ್ಲಕ್ಷ್ಯ, ಬೇಜವಾಬ್ದಾರಿ ಆರೋಪ ಹಿನ್ನೆಲೆ ಅತಿಥಿ ಉಪನ್ಯಾಕರು ಮತ್ತು ಡಿ ಗ್ರೂಪ್ ಸಿಬ್ಬಂದಿಗಳನ್ನು ಕೆಲಸದಿಂದ ವಜಾ ಮಾಡಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ED ಕಾಂತರಾಜು ಆದೇಶಿಸಿದ್ದಾರೆ.
ಸಿಎಂ ಸಂತಾಪ.. 5 ಲಕ್ಷ ಪರಿಹಾರ : ದುಃಖತಪ್ತ ಪೋಷಕರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿರುವ ಅವರು, ದುರಂತದಲ್ಲಿ ಸಾವನ್ನಪ್ಪಿದ ನಾಲ್ವರು ವಿದ್ಯಾರ್ಥಿಗಳ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ. ಇನ್ನು ಪ್ರವಾಸದ ಸಮಯದಲ್ಲಿ ಶಿಕ್ಷಕರು ಹೆಚ್ಚಿನ ಎಚ್ಚರಿಕೆಯನ್ನು ತೆಗೆದುಕೊಳ್ಳಬೇಕು. ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡುವಾಗ ಮಕ್ಕಳ ಮೇಲೆ ನಿಗಾ ವಹಿಸಬೇಕು. ಮಕ್ಕಳನ್ನು ಕಳೆದುಕೊಂಡ ಪೋಷಕರ ನೋವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಇಂತಹ ಘಟನೆಗಳು ಮತ್ತೆಂದೂ ಮರುಕಳಿಸದಂತೆ ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ದುರಂತ ಸಂಭವಿಸಿದ್ದೇಗೆ? ಕೋಲಾರ ಜಿಲ್ಲೆಯ ಮುಳಬಾಗಿಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿಗಳು ಮತ್ತು ಶಿಕ್ಷಕರ ತಂಡ ಮಂಗಳವಾರ ತಮ್ಮ ಶಾಲಾ ಪ್ರವಾಸದ ಅಂಗವಾಗಿ ಮುರುಡೇಶ್ವರಕ್ಕೆ ತೆರಳಿತ್ತು. ಪೊಲೀಸರ ಪ್ರಕಾರ, ಸಂಜೆ 5.30ರ ಸುಮಾರಿಗೆ ಶಿಕ್ಷಕರು, ವಿದ್ಯಾರ್ಥಿಗಳ ಜೊತೆಗೆ ಬೀಚ್‌ಗೆ ತೆರಳಿದರು. ಜೀವರಕ್ಷಕರ ಎಚ್ಚರಿಕೆಯ ಹೊರತಾಗಿಯೂ, ಏಳು ವಿದ್ಯಾರ್ಥಿಗಳು ಸಮುದ್ರದ ಅಲೆಗಳಿಗೆ ಸಿಕ್ಕಿ ಕೊಚ್ಚಿ ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿಗಳನ್ನು ಜೀವರಕ್ಷಕರು ಮತ್ತು ಇತರ ಏಜೆನ್ಸಿಗಳ ಸಹಾಯದಿಂದ ರಕ್ಷಿಸಲಾಗಿತ್ತು. ಆದರೆ ನಾಲ್ವರು ಸಮುದ್ರ ಪಾಲಾಗಿದ್ದರು. ನಿನ್ನೆ ಜೀವರಕ್ಷಕರು, ಗೃಹ ರಕ್ಷಕರು, ಮೀನುಗಾರರು ಮತ್ತು ಪೊಲೀಸರನ್ನು ಒಳಗೊಂಡ ತಂಡ ಶೋಧ ಕಾರ್ಯಾಚರಣೆ ನಡೆಸಿ, ಬೆಳಿಗ್ಗೆ ಬಾಲಕಿಯರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಇದನ್ನೂ ಓದಿ : ಶೇ.99 ರಷ್ಟು ಪುರುಷರದ್ದೇ ತಪ್ಪಿರುತ್ತೆ – ಬೆಂಗಳೂರು ಟೆಕ್ಕಿ ಅತುಲ್ ಸೂಸೈಡ್ ಬಗ್ಗೆ ಕಂಗನಾ ರಣಾವತ್ ರಿಯಾಕ್ಷನ್!