ಬೆಂಗಳೂರು : ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಇಂದು ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ. ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಎದುರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.
ಈ ಬಗ್ಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದು, ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗು ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ಹಿನ್ನೆಲೆಯಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ಫೆಬ್ರವರಿ7 ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.
ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಕರ್ನಾಟಕದ ಜನತೆ ಕಾಂಗ್ರೆಸ್ಗೆ ಮತ ನೀಡಿದ್ದು ಗ್ಯಾರಂಟಿಗಳನ್ನು ನಂಬಿ ಆದರೆ, ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಬಿಟ್ಟಿ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಂಡು ದೆಹಲಿಯಲ್ಲಿ ಶೋಕಿ ಮಾಡಲು ಹೋಗಿದೆ.
ಕನ್ನಡಿಗರ ಪ್ರಶ್ನೆಗಳಿಗೆ ಉತ್ತರ ಕೊಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ಸಿಗರು, ತಾವೇ ಮಾಡಿದ ಸುಳ್ಳುಗಳಿಗೆ ಸತ್ಯ ಹುಡುಕುತ್ತಿದ್ದಾರೆ. ಜಂತರ್ ಮಂತರ್‌ನಲ್ಲಿ ಬೃಹನ್ನಳೆ ನಾಟಕ ಮಾಡಲು ಮೇಕಪ್ ಹಾಕಿ ಕೂತಿದ್ದಾರೆ ಎಡಬಿಡಂಗಿ ಕಾಂಗ್ರೆಸ್ಸಿಗರು ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ.
ಇದನ್ನೂ ಓದಿ : ದೆಹಲಿ ಚಲೋ – ಇಂದು ಕೇಂದ್ರದ ವಿರುದ್ಧ ರಾಜ್ಯ ಸರ್ಕಾರದಿಂದ ಪ್ರತಿಭಟನೆ..!