ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ಆದೇಶ!

ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಬಿಜೆಪಿ ವಿರುದ್ದ ಕೇಸ್ ಹಾಕಲು ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಸುಳ್ಳು ಪ್ರಚಾರ ಮಾಡಿದೆ ಎಂದು ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತಂತೆ ಗೃಹ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಗೃಹ ಇಲಾಖೆಯ ಆದೇಶದ ಎಕ್ಸ್​​ಕ್ಲೂಸಿವ್​ ಪ್ರತಿ ಬಿಟಿವಿಗೆ ಲಭ್ಯವಾಗಿದೆ.

ರಾಜ್ಯ ಸರ್ಕಾರದ 2 ವರ್ಷಗಳ ವೈಫಲ್ಯತೆ ಬಗ್ಗೆ ಆರೋಪ ಪಟ್ಟಿ ಎಂಬ ಶೀರ್ಷಿಕೆಯಡಿಯಲ್ಲಿ ದೃಷ್ಯ ಮಾಧ್ಯಮ ಮತ್ತು ಮುದ್ರಣ ಮಾಧ್ಯಮಗಳಲ್ಲಿ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ಸಂಗತಿಗಳನ್ನು ಅಳವಡಿಸಿಕೊಂಡು ಕರ್ನಾಟಕ ಭಾರತೀಯ ಜನತಾ ಪಕ್ಷವು ಸುಳ್ಳು ಪ್ರಚಾರ ಮಾಡಿರುವ ಬಗ್ಗೆ ಬೆಂಗಳೂರಿನ ಮಾನ್ಯ 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ.

ಬೆಂಗಳೂರಿನ 42ನೇ ಸಿಎಂಎಂ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗೆ ಗೃಹ ಇಲಾಖೆ ಸೂಚನೆ ನೀಡಿದೆ. ಈ ಪ್ರಕರಣವನ್ನು ನಿರ್ವಹಿಸಲು 67ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲ ಬಿ.ಎಸ್. ಪಾಟೀಲ್ ಮತ್ತು ಬೆಂಗಳೂರಿನ 61ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಸರ್ಕಾರಿ ವಕೀಲರಾದ ಶೈಲಜಾ ನಾಯಕ್ ಅವರನ್ನು ನಿಯೋಜಿಸಲಾಗಿದೆ.

ಅಲ್ಲದೇ, ಶ್ರೀ ಕುಮಟಾ ಪ್ರಕಾಶ್, ಸರ್ಕಾರದ ಉಪ ಕಾರ್ಯದರ್ಶಿ, ಒಳಾಡಳಿತ ಇಲಾಖೆ (ಕಾನೂನು ಮತ್ತು ಸುವ್ಯವಸ್ಥೆ) ಇವರನ್ನು ಈ ಪ್ರಕರಣದಲ್ಲಿ ಎಲ್ಲಾ ಸಂಬಂಧಿಸಿದ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಸರ್ಕಾರಿ ಅಭಿಯೋಜಕರಿಗೆ ಸಂಪೂರ್ಣ ದಾಖಲೆ, ಮಾಹಿತಿ ನೀಡಲು ನೇಮಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ : ಬಮೂಲ್​ ಚುನಾವಣೆಯಲ್ಲಿ ಕಾಂಗ್ರೆಸ್​ ಮೇಲುಗೈ – 10 ಕ್ಷೇತ್ರಗಳಲ್ಲಿ ‘ಕೈ’ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು!

Btv Kannada
Author: Btv Kannada

Read More