ಬೆಂಗಳೂರು : ಸಲಿಂಗ ಕಾಮ ಪ್ರಕರಣದಲ್ಲಿ ಬಂಧನವಾಗಿರುವ ಎಂಎಲ್‌ಸಿ ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದರಿಂದ ಅವರನ್ನು ಹಾಸನದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ವೈದ್ಯಕೀಯ ಪರೀಕ್ಷೆ ಮಾಡಿಸಿದ ಬಳಿಕ ನಿನ್ನೆ ನಗರದ ಕೋರಂಮಗಲದ 42ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲು ನ್ಯಾಯಾಧೀಶರು ಸೂಚಿಸಿದ್ದಾರೆ.
ಸೂರಜ್ ರೇವಣ್ಣ ನಿನ್ನೆ ರಾತ್ರಿಯೇ ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಜೈಲಿಗೆ ತಡವಾಗಿ ಆಗಮಿಸಿದ ಹಿನ್ನೆಲೆ ಇಂದು ಜೈಲಾಧಿಕಾರಿಗಳು ಸೂರಜ್ ರೇವಣ್ಣಗೆ ಇಂದು ವಿಚಾರಣಾಧೀನ ಖೈದಿ ನಂಬರ್ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಬಾಡಿ ವಾರೆಂಟ್ ಮೇಲೆ ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪಿಸಿ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಜೂನ್ 22ರಂದು ರಾತ್ರಿ ಎಫ್‌ಐಆರ್ ದಾಖಲಾಗಿತ್ತು. ನಂತರ ಐದು ಕೋಟಿ ರೂ. ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಸಂತ್ರಸ್ತನ ವಿರುದ್ಧ ಸಾಕ್ಷ್ಯ ನೀಡಲು ಸೂರಜ್, ಹೊಳೆನರಸೀಪುರ ಗ್ರಾಮಾಂತರ ಠಾಣೆಗೆ ತೆರಳಿದ್ದಾಗ ಸುದೀರ್ಘ ವಿಚಾರಣೆ ಬಳಿಕ ಪೊಲೀಸರು ಬಂಧಿಸಿದ್ದರು. ಇದೀಗ ಸೂರಜ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪ್ರಕರಣದ ವಿವರ : ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದರು. ಬಳಿಕ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಖಾಸಗಿ ಫೈನಾನ್ಸ್ ಕಂಪನಿಯಲ್ಲಿ ಉದ್ಯೋಗಿಯಾದ ಜೆಡಿಎಸ್ ಕಾರ್ಯಕರ್ತ, ಜೂನ್ 16ರಂದು ಸೂರಜ್ ತನಗೆ ವಾಟ್ಸ್‌ಆ್ಯಪ್ ಮೂಲಕ ಸಂದೇಶ ಕಳುಹಿಸಿ, ಗನ್ನಿಕಡ ತೋಟದ ಮನೆಗೆ ಆಹ್ವಾನಿಸಿದ್ದರು. ಉದ್ಯೋಗ ನೀಡುವ ಭರವಸೆ ನೀಡಿ ತನ್ನನ್ನು ಕರೆಸಿಕೊಂಡು, ಸಲಿಂಗಕಾಮಕ್ಕೆ ಒತ್ತಾಯಿಸಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದರು. ಇದರಿಂದ ನನ್ನ ದೇಹದ ಮೇಲೆ ಗಾಯಗಳಾಗಿದ್ದು, ಈ ಬಗ್ಗೆ ಎಲ್ಲಾದರೂ ಬಹಿರಂಗಪಡಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಸಂತ್ರಸ್ತ ಆರೋಪಿಸಿದ್ದರು.
ಇದನ್ನೂ ಓದಿ : ತುಮಕೂರು : ಪೊಲೀಸರಂತೆ ನಟಿಸಿ ಮಹಿಳೆಯ ಮಾಂಗಲ್ಯ ಸರವನ್ನ ಎಗರಿಸಿದ ಖದೀಮರು..!