ಬೆಂಗಳೂರು : ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ SIT ರಚಿಸಿ ತನಿಖೆಗೆ ಹೈಕೋರ್ಟ್ ಆದೇಶ ನೀಡಿದೆ. 3 ತಿಂಗಳಲ್ಲಿ ವಿಚಾರಣೆ ನಡೆಸಿ ವರದಿ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿದೆ.
ಮೂವರು IPS ಅಧಿಕಾರಿಗಳ SIT ರಚಿಸಿದ ಹೈಕೋರ್ಟ್, CBI ಎಸ್ಪಿ ವಿನಾಯಕ್ ವರ್ಮಾ ನೇತೃತ್ವದಲ್ಲಿ ತನಿಖೆ ನಡೆಯಲಿದೆ. IPS ಅಧಿಕಾರಿಗಳಾದ ಅಕ್ಷಯ್ , ನಿಶಾ ಜೇಮ್ಸ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ.
ಇತ್ತೀಚಿಗೆ ಬೋವಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸಿದ್ದ 33 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಜೀವಾ ಬರೆದಿಟ್ಟಿರುವ 13 ಪುಟಗಳ ಡೆತ್‌ನೋಟ್ ಪತ್ತೆಯಾಗಿತ್ತು. ಈ ಡೆತ್ನೋಟ್ನಲ್ಲಿ, ಭೋವಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಐಡಿ ತನಿಖಾಧಿಕಾರಿಗಳು ಹಲವು ಬಾರಿ ವಿಚಾರಣೆಗೆ ಕರೆಸಿ ಮಾನಸಿಕ ಕಿರುಕುಳ ನೀಡಿದ್ದಾರೆ. ತನಿಖಾಧಿಕಾರಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‌ನೋಟ್ ಜೀವಾ ಉಲ್ಲೇಖಿಸಿದ್ದರು. ಜೀವಾ ಬರೆದಿಟ್ಟಿದ್ದ ಡೆತ್ ನೋಟ್ ಹಾಗೂ ಮೃತಳ ಸಹೋದರಿ ನೀಡಿದ್ದ ದೂರನ್ನ ಆಧರಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದ ಬನಶಂಕರಿ ಠಾಣೆ ಪೊಲೀಸರು ಪ್ರಾಥಮಿಕ ತನಿಖೆ ಕೈಗೆತ್ತಿಕೊಂಡಿದ್ದರು.
ಮತ್ತೊಂದೆಡೆ, ಜೀವಾ ಆತ್ಮಹತ್ಯೆಯ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ವಕೀಲರ ಸಂಘ ಹೈಕೋರ್ಟ್‌ಗೆ ಮನವಿ ಸಲ್ಲಿಸಿತ್ತು. ಪ್ರಕರಣ ಗಂಭೀರತೆ ಪಡೆಯುತ್ತಿದ್ದಂತೆ ಎಚ್ಚೆತ್ತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ತನಿಖೆಯನ್ನ ಸಿಸಿಬಿಗೆ ವಹಿಸಿದ್ದರು. ಇದೀಗ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ SIT ರಚಿಸಿ ತನಿಖೆಗೆ ಹೈಕೋರ್ಟ್ ಆದೇಶ ಹೊರಡಿಸಿದೆ.