ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ತನ್ನ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಜುಲೈ 1ರಿಂದ ಅನ್ವಯವಾಗುವಂತೆ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.
ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಫುರ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ಗ್ರಾಹಕರು ಇನ್ನು ಮುಂದೆ ಹೊಸ ವಿದ್ಯುತ್ ಸಂಪರ್ಕಕ್ಕೆ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಕರೆಂಟ್ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಆದೇಶದಂತೆ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನ ಕಡ್ಡಾಯಗೊಳಿಸಲಾಗಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಸ್ಕಾಂ ವ್ಯಾಪ್ತಿಗೆ ಒಳಪಡುವ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ ಕಳೆದ ಫೆಬ್ರವರಿ ತಿಂಗಳ 15ರಿಂದಲೇ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭವಾಗಿದೆ. ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿಯೂ ಸಹ ಸ್ಮಾರ್ಟ್ ಮೀಟರ್ ಅಳವಡಿಸುವ ಯೋಜನೆ ವಿಸ್ತರಿಸಣೆ ಮಾಡಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.
ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು. ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 6ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಇದನ್ನೂ ಓದಿ : ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ – 600ಕ್ಕೂ ಹೆಚ್ಚು ಭಕ್ತರಿಗೆ ಗಾಯ, 40ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕ!
