ಅನಗತ್ಯ ಖರ್ಚಿಗೆ ಬ್ರೇಕ್‌.. ಈ ಬಾರಿ 11 ದಿನಗಳ ಕಾಲ ಮೈಸೂರು ದಸರಾ ಆಚರಣೆ – ಸಿಎಂ ಸಿದ್ದರಾಮಯ್ಯ!

ಮೈಸೂರು : ನಾಡ ಹಬ್ಬ ಮೈಸೂರು ದಸರಾ ಆಚರಣೆಗೆ ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ದಸರಾ ಮಹೋತ್ಸವದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆಗೆ ನಿರ್ಧರಿಸಲಾಗಿದೆ. 9 ದಿನಗಳ ಬದಲಾಗಿ ಈ ಬಾರಿ 11 ದಿನಗಳ ಕಾಲ ದಸರಾ ಆಚರಣೆಗೆ ನಿರ್ಧರಿಸಲಾಗಿದೆ. ಅಧಿಕ ಪಂಚಮಿ ಬರುವುದರಿಂದ ಈ ಬಾರಿ 11 ದಿನಗಳ ಕಾಲ ಮೈಸೂರು ದಸರಾ ಆಚರಿಸಲಾಗುವುದು. ಈ ಹಿಂದೆ 8 ಬಾರಿ 11 ದಿನಗಳ ಕಾಲ ದಸರಾ ಆಚರಿಸಲಾಗಿತ್ತು ಎಂದರು.

ನಾಡಿನೆಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ರೈತರು ಸಂತಸದಿಂದ ಇದ್ದಾರೆ. ಹಾಗಾಗಿ ಈ ಬಾರಿ ವಿಜೃಂಭಣೆಯಿಂದ ದಸರಾ ಮಹೋತ್ಸವ ಆಚರಿಸಲಾಗುವುದು. ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.

ಇನ್ನು, ಸೆಪ್ಟಂಬರ್‌ 22ರಂದು ದಸರಾ ಹಬ್ಬಕ್ಕೆ ಚಾಲನೆ ದೊರೆಯಲಿದ್ದು, ಅಕ್ಟೋಬರ್‌ 2ರಂದು ವಿಜಯದಶಮಿ, ಜಂಬೂ ಸವಾರಿ ನಡೆಯಲಿದೆ. ದಸರಾಕ್ಕೆ ತನ್ನದೇ ಆದ ಚಾರಿತ್ರಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯಿದ್ದು, ಇದಕ್ಕೆ ಪೂರಕವಾಗಿ ದಸರಾ ಆಚರಿಸಲಾಗುವುದು. ವಿಶ್ವ ವಿಖ್ಯಾತ ದಸರಾದ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

ಕಳೆದ ವರ್ಷ ದಸರಾ ಆಚರಣೆಗೆ ಒಟ್ಟು ರೂ. 40 ಕೋಟಿ ಅನುದಾನ ಒದಗಿಸಲಾಗಿತ್ತು. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆಗೆ ಬೇಕಾದಷ್ಟು ಅನುದಾನವನ್ನು ಒದಗಿಸಲಾಗುವುದು. ಸರ್ಕಾರದ ಸಾಧನೆಗಳನ್ನು ಮತ್ತು ಇಲಾಖಾ ಕಾರ್ಯಕ್ರಮಗಳನ್ನು ಸರಿಯಾಗಿ ಪ್ರತಿಬಿಂಬಿಸುವಂತಹ ವಸ್ತು ಪ್ರದರ್ಶನ, ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಬೇಕು. ಅಕ್ಟೋಬರ್‌ 2ರಂದು ವಿಜಯದಶಮಿ ಬಂದಿರುವ ಕಾರಣ ಸ್ತಬ್ಧ ಚಿತ್ರಗಳಲ್ಲಿ ಗಾಂಧೀಜಿ ವಿಚಾರಧಾರೆಗಳಿಗೆ ಸಹ ಅವಕಾಶ ಕಲ್ಪಿಸಬೇಕು. ಕಲ್ಯಾಣ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳ ಮಾಹಿತಿ ಒದಗಿಸಲು ವ್ಯವಸ್ಥೆ ಮಾಡಬೇಕು.

ದಸರಾ ಸಂದರ್ಭದಲ್ಲಿ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕು. 10ಲಕ್ಷಕ್ಕೂ ಹೆಚ್ಚು ಮಂದಿ ಸೇರುವ ಸಂದರ್ಭ ಇದಾಗಿದೆ. ವಿದೇಶಿಗರೂ ಹೆಚ್ಚಿನ ಪ್ರಮಾಣದಲ್ಲಿ ಆಗಮಿಸುತ್ತಾರೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಲ್ಲಾ ಕಡೆ ಮುನ್ನೆಚ್ಚರಿಕೆ ವಹಿಸಬೇಕು. ಅರಮನೆ ಮುಂಭಾಗದಲ್ಲಿ ಆಸನದ ವ್ಯವಸ್ಥೆಯನ್ನು ಕಳೆದ ಬಾರಿಗಿಂತ ಈ ಬಾರಿ ಕಡಿಮೆ ಮಾಡಿ ಜನದಟ್ಟಣೆಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಿ.

ಪೊಲೀಸರು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆ, ಕೆಆರ್‌ಎಸ್‌ಗೆ ಹೋಗುವ ರಸ್ತೆ ಸೇರಿದಂತೆ ಎಲ್ಲಾ ಪ್ರಮುಖ ರಸ್ತೆಗಳನ್ನು ದುರಸ್ತಿ ಮಾಡುವ ಕಾರ್ಯವನ್ನು ಈಗಲೇ ಆರಂಭಿಸಬೇಕು. ಜಾನಪದ ಕಲೆಗಳನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಬೇಕು. ಜಾನಪದ ಪ್ರದರ್ಶನದಲ್ಲಿ ಏಕತಾನತೆ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಕೆಲ ಮಹತ್ವದ ಸೂಚನೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ.

ಇದನ್ನೂ ಓದಿ : ಗೂಢಚಾರ ಸಂಸ್ಥೆ ‘ರಾ’ ಮುಖ್ಯಸ್ಥರಾಗಿ ಹಿರಿಯ IPS ಅಧಿಕಾರಿ ಪರಾಗ್ ಜೈನ್ ನೇಮಕ!

Btv Kannada
Author: Btv Kannada

Read More