ಜಯಲಲಿತಾಗೆ ಸೇರಿದ್ದ ಕೋಟ್ಯಂತರ ಮೌಲ್ಯದ ವಸ್ತುಗಳು ವಾಪಸ್ – ಕೋರ್ಟ್​ನಿಂದ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರ!

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ದಿವಂಗತ ಜಯಲಲಿತಾ ಅವರಿಗೆ ಸಂಬಂಧಿಸಿದ ಕೋಟ್ಯಂತರ ರೂ. ಮೌಲ್ಯದ ಆಸ್ತಿಪತ್ರಗಳು, ಅಪಾರ ಒಡವೆ ಮತ್ತು ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಯು ಬೆಂಗಳೂರಿನ ವಿಚಾರಣ ನ್ಯಾಯಾಲಯದಲ್ಲಿ ನಡೆಯುತ್ತಿದೆ.

ಜಯಲಲಿತಾ ಅವರಿಗೆ ಸಂಬಂಧಿಸಿದ 7,040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 12 ರೆಫ್ರಿಜರೇಟರ್, 3 ಐರನ್ ಲಾಕರ್ ಸೇರಿದಂತೆ ಇನ್ನಿತರ ಬೆಲೆ ಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಶುಕ್ರವಾರ ಆರಂಭವಾಗಿದೆ. ಈ ಪ್ರಕ್ರಿಯೆ ಇಂದು ಕೂಡ ಮುಂದುವರಿಯಲಿದೆ. ಬೆಂಗಳೂರಿನ ವಿಚಾರಣ ನ್ಯಾಯಾಲಯದ ನ್ಯಾಯಾಧೀಶರ ಸಮ್ಮುಖದಲ್ಲಿ ಜಯಲಲಿತಾ ಅವರಿಗೆ ಸೇರಿದ ಬೆಲೆ ಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ವರ್ಗಾವಣೆ ಮಾಡಲಾಗುತ್ತಿದೆ.

ಏನಿದು ಪ್ರಕರಣ? ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ| ಜೆ. ಜಯಲಲಿತಾ ಅವರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರಕಾರದ ಸುಪರ್ದಿಗೆ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹಿಂದೆ ಆದೇಶಿಸಿತ್ತು.

ಹಿಂದಿರುಗಿಸಲು 2024ರ ಫೆ.19ಕ್ಕೆ ದಿನಾಂಕ ನಿಗದಿಪಡಿಸಿತ್ತು. ಈ ನಡುವೆ ಜಯಲಲಿತಾ ಅವರ ಸಂಬಂಧಿಕರು ಎಂದು ಹೇಳಿಕೊಂಡಿದ್ದ ದೀಪಾ ಮತ್ತು ದೀಪಕ್ ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರಿಂದ ಆದೇಶವನ್ನು ತಡೆಹಿಡಿದಿತ್ತು. ಈಗ ಮೇಲ್ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಆಸ್ತಿ ಮತ್ತು ಆಭರಣಗಳನ್ನು ಹಸ್ತಾಂತರಿಸುವ ಪ್ರಕ್ರಿಯೆ ಕೈಗೊಂಡಿದೆ.

ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ : ಜಯಲಲಿತಾ ಅವರ ವಿರುದ್ಧದ ಪ್ರಕರಣದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳನ್ನು ಹಿಂದಿರುಗಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರ ನ್ಯಾಯಪೀಠವು 2017ರಲ್ಲಿ ಕರ್ನಾಟಕ ರಾಜ್ಯ ವಿ.ಜೆ.ಜಯಲಲಿತಾ ಪ್ರಕರಣದಲ್ಲಿ ನೀಡಿದ ತೀರ್ಪಿನಲ್ಲಿನ ತನ್ನ ಅಭಿಪ್ರಾಯ ತಿಳಿಸಿದೆ. ಈ ಪ್ರಕರಣದ ವಿಚಾರಣೆ ನಿಂತಿದೆ ಎಂದ ಮಾತ್ರಕ್ಕೆ ಜಯಲಲಿತಾ ಆಪರಾಧದ ಆರೋಪಗಳಿಂದ ಮುಕ್ತರಾಗಿದ್ದಾರೆ ಎಂಬ ಅರ್ಥವಲ್ಲ ಎಂದು ಕೋರ್ಟ್ ಹೇಳಿದೆ.

Btv Kannada
Author: Btv Kannada

Read More