‘ಅಭಿನಯ ಸರಸ್ವತಿ’ಗೆ ಭಾವುಕ ವಿದಾಯ.. CM ಸಿದ್ದರಾಮಯ್ಯ, ಡಿಕೆಶಿ ಸೇರಿ ಗಣ್ಯರಿಂದ ಸಂತಾಪ!

ಬೆಂಗಳೂರು : ಸ್ಯಾಂಡಲ್​​ವುಡ್​ನ ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾ ದೇವಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಪ್ರಾರ್ಥಿಸುವೆ. ಅವರ ದುಃಖತಪ್ತ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ : ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿ, ಅಭಿನಯ ಸರಸ್ವತಿಗೆ ಪ್ರೀತಿಯ ವಿದಾಯ. ಕನ್ನಡದ ಹಿರಿಯ ನಟಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನೋವು ತಂದಿದೆ‌. ಕನ್ನಡ ಸೇರಿದಂತೆ ಪಂಚ ‌ಭಾಷೆಗಳಲ್ಲಿ ನಟಿಸಿ, 6 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿ, ಸೈ ಎನಿಸಿಕೊಂಡಿದ್ದರು‌. ಅಗಲಿದ ಅವರ ಆತ್ಮಕ್ಕೆ ದೇವರು ಚಿರಶಾಂತಿಯನ್ನು ನೀಡಲಿ. ಅಪಾರ ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಓಂ ಶಾಂತಿ​ ಎಂದು ಟ್ವೀಟ್ ಮಾಡಿದ್ದಾರೆ.

ಸಿಎನ್​​ ಅಶ್ವತ್​ ನಾರಾಯಣ್​ :  ಭಾರತೀಯ ಚಿತ್ರರಂಗದ ಅಮರ ನಟಿ ಶ್ರೀಮತಿ ಬಿ. ಸರೋಜಾ ದೇವಿ ಅವರ ಅಗಲಿಕೆಯ ಸುದ್ದಿ ಅತ್ಯಂತ ದುಃಖದಾಯಕ. ಅವರು ಕನ್ನಡ ಚಿತ್ರರಂಗದ ಕಿರೀಟಮಣಿ. ಜೊತೆಗೆ ತಮಿಳು, ತೆಲುಗು, ಹಿಂದಿ ಚಿತ್ರರಂಗಗಳಲ್ಲಿಯೂ ಅಪಾರ ಪ್ರಶಂಸೆಯನ್ನು ಗಳಿಸಿದ್ದರು. ಅವರ ಕಲಾ ಜೀವನವು ದೇಶದ ಸಾಂಸ್ಕೃತಿಕ ಪರಂಪರೆಯ ಹೆಮ್ಮೆಯ ಅಧ್ಯಾಯ. ಅವರ ಅಗಲಿಕೆಯಿಂದ ಕನ್ನಡ ಮಾತ್ರವಲ್ಲದೆ ಇಡೀ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ : ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಖವಾಗಿದೆ. “ಅಭಿನಯ ಸರಸ್ವತಿ” ಎಂದೇ ಖ್ಯಾತರಾಗಿ ಸುಮಾರು ಏಳು ದಶಕಗಳ ಕಾಲ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಹಿಂದಿ, ತೆಲುಗು, ತಮಿಳು ಚಿತ್ರರಂಗದಲ್ಲಿಯೂ ತಮ್ಮದೇ ಆದ ಛಾಪು ಮೂಡಿಸಿ ಭಾರತೀಯ ಚಿತ್ರ ರಂಗದ ಶ್ರೇಷ್ಠ ನಟಿಯರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು. ಅನೇಕ ಪೌರಾಣಿಕ ಮತ್ತು ಐತಿಹಾಸಿ ಚಿತ್ರಗಳಲ್ಲಿ ನಟಿಸಿದ್ದ ಅವರು ಕನ್ನಡಿಗರ ಮನೆ ಮಾತಾಗಿದ್ದರು. ಅವರು ಕಿತ್ತೂರು ಚೆನ್ನಮ್ಮನ ಪಾತ್ರದಲ್ಲಿ ನಟಿಸಿರುವುದು ಇನ್ನೂ ಎಲ್ಲರ ಮನದಲ್ಲಿ ಅಚ್ಚಳಿಯದೇ ಉಳಿದಿದೆ. ಅವರ ಸಾಧನೆಗೆ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿಗಳು ಅರಸಿ ಬಂದಿದ್ದವು. ಬಿ. ಸರೋಜಾದೇವಿ ನಿಧನದಿಂದ ಕನ್ನಡ ಚಿತ್ರರಂಗ ಬಡವಾದಂತಾಗಿದೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಅವರ ಕುಟುಂಬದವರಿಗೆ ಭಗವಂತ ಕರುಣಿಸಲಿ, ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಉದ್ಯಮಿ ವಿಜಯ್ ಟಾಟಾ.. ‘ಅಮೃತ ಸಿನಿ ಕ್ರಾಫ್ಟ್’ನಿಂದ 6 ಸಿನಿಮಾ ಘೋಷಣೆ!

Btv Kannada
Author: Btv Kannada

Read More