ಬೆಂಗಳೂರು : ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಆದೇಶ ಪ್ರಶ್ನಿಸಿ ಗಾಳಿ ಆಂಜನೇಯ ಸ್ವಾಮಿ ಟ್ರಸ್ಟ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ತುರ್ತಾಗಿ ಅರ್ಜಿ ವಿಚಾರಣೆ ನಡೆಸುವಂತೆ ಟ್ರಸ್ಟ್ ಪರ ವಕೀಲ ಪಿ ಪ್ರಸನ್ನ ಕುಮಾರ್ ಅವರು ಹೈಕೋರ್ಟ್ ನ್ಯಾ. ಸುನೀಲ್ ದತ್ ಯಾದವ್ ಅವರ ಪೀಠಕ್ಕೆ ಮನವಿ ಮಾಡಿದ್ದಾರೆ. ಹೀಗಾಗಿ ನಾಳೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ಪೀಠ ತಿಳಿಸಿದೆ.
ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ಗಾಳಿ ಆಂಜನೇಯ ಸ್ವಾಮಿ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ. ನಮ್ಮ ಪೂರ್ವಿಕರಿಂದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯತ್ವ ದೊರತಿದ್ದು, ಇಷ್ಟು ವರ್ಷ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ ನಮಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥರು ಮತ್ತು ಟ್ರಸ್ಟಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.
ಆಡಳಿತ ಮಂಡಳಿಯ ಹಾಗೂ ಧಾರ್ಮಿಕ ದತ್ತಿ ಇಲಾಖೆ ಕಿತ್ತಾಟದ ಮಧ್ಯೆ ಪ್ರತಿನಿತ್ಯ ಸಾವಿರಾರು ಭಕ್ತರು ಗಾಳಿ ಆಂಜನೇಯನ ದರ್ಶನ ಪಡೆಯುತ್ತಿದ್ದಾರೆ. ಭಕ್ತರಿಗೆ ಮತ್ತು ಅಲ್ಲಿನ ಪುರೋಹಿತ ವರ್ಗಕ್ಕೆ ಯಾವುದೇ ಸಮಸ್ಯೆ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ.
ಇದನ್ನೂ ಓದಿ : ಶಿರಾಡಿಘಾಟ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಜಲಪಾತಕ್ಕೆ ಬಿದ್ದ ಕಾರು – ಪ್ರಯಾಣಿಕರು ಗ್ರೇಟ್ ಎಸ್ಕೇಪ್!







