ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಸಭೆ ಇಂದಿನ (ಜುಲೈ 15 ಮತ್ತು 16ರಂದು) ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಸೋಮವಾರ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಿಎಂಗಳು, ವಿವಿಧ ರಾಜ್ಯಗಳ ಹಾಲಿ ಮತ್ತು ಮಾಜಿ ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷ ಪ್ರಕಟಣೆಯಲ್ಲಿ ತಿಳಿಸಿದೆ. ಇಂದು ಸಂಜೆ 5ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಮತ್ತು ಜುಲೈ 16ರಂದು ಬೆಳಿಗ್ಗೆ 10ಗಂಟೆಗೆ ಹೋಟೆಲ್ ಶಾಂಗ್ರಿಲಾದಲ್ಲಿ ಸಭೆ ನಡೆಯಲಿದೆ.
ದೇಶದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಸಮುದಾಯಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಪರಿಹಾರ ಒದಗಿಸಲು ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಸಲಹಾ ಮಂಡಳಿಯನ್ನು ಎಐಸಿಸಿ ರಚಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಮಂಡಳಿಯ ರಚನೆಗೆ ಅನುಮೋದನೆ ನೀಡಿದ್ದು, ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಮತ್ತು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯಿಲಿ ಕೂಡ ಮಂಡಳಿಯಲ್ಲಿದ್ದಾರೆ. ನಾಲ್ವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಒಟ್ಟು 24 ಸದಸ್ಯರು ಈ ಮಂಡಳಿಯಲ್ಲಿದ್ದಾರೆ.
ಸಚಿವರಾದ ಬೈರತಿ ಸುರೇಶ್, ಮಧು ಬಂಗಾರಪ್ಪ, ಸಂತೋಷ್ ಲಾಡ್, ಎನ್.ಎಸ್. ಬೋಸರಾಜು, ಮಂಕಾಳ ವೈದ್ಯ, ಎಐಸಿಸಿ ಕಾರ್ಯದರ್ಶಿಗಳಾದ ಸೂರಜ್ ಹೆಗ್ಡೆ, ಪಿ.ವಿ. ಮೋಹನ್ ಸೇರಿದಂತೆ ವಿವಿಧ ರಾಜ್ಯಗಳ ಪ್ರಮುಖರು ಸೇರಿ ಒಟ್ಟು 25 ಮಂದಿ ವಿಶೇಷ ಆಹ್ವಾನಿತರಾಗಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ – 35 IPS ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ!







