ಬೆಂಗಳೂರು : ನಾನು ಅಪ್ಪಟ ಕಾಂಗ್ರೆಸಿಗ. ಹುಟ್ಟಿನಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಜೀವ ಇರುವ ತನಕವೂ ಕಾಂಗ್ರೆಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದರ ಪರಿಣಾಮ ನೀವು ಬಿಜೆಪಿ ಹಾಗೂ RSS ಜೊತೆ ಕೈ ಜೋಡಿಸುವ ಬಗ್ಗೆ ಚರ್ಚೆಯಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ RSS ಬಗ್ಗೆಯೂ ತಿಳಿದುಕೊಂಡಿದ್ದೇನೆ ಎಂದಿದ್ದಾರೆ.
ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. RSS ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ. RSS ಪ್ರತಿ ತಾಲೂಕು, ಜಿಲ್ಲೆ ಸೇರಿದಂತೆ ಎಲ್ಲ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.
ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ RSS ಇತಿಹಾಸ ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಹಿಮಾಚಲ ಪ್ರದೇಶದಲ್ಲಿ ಅರೆಸ್ಟ್ – ಮನೆ, ಕಂಪನಿಗಳಲ್ಲಿ ಮುಂದುವರೆದ ಶೋಧ!







