ಕಲಬುರಗಿ : ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಪರದಾರ ಮೋತಕಪಳ್ಳಿ ಗ್ರಾಮದಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಭಾರಿ ಅನಾಹುತ ಸಂಭವಿಸಿದೆ. ನಾಗಮ್ಮ ಕಂಟೆಪ್ಪ ಪೂಜಾರಿ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ.

ಅನಿಲ ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ಸುಮಾರು ಒಂದು ಲಕ್ಷ ರೂಪಾಯಿ ನಗದು, ಚಿನ್ನಾಭರಣಗಳು, ಬಟ್ಟೆಬರೆಗಳು ಮತ್ತು ಇತರೆ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿ ಭಾರೀ ನಷ್ಟ ಉಂಟಾಗಿದೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ದುರ್ಘಟನೆಯಿಂದ ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ, ಕುಟುಂಬದವರು ತಮ್ಮೆಲ್ಲಾ ಆಸ್ತಿಪಾಸ್ತಿ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಘಟನೆಯ ಸಂಬಂಧ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಘಟನೆಗೆ ಕಾರಣವನ್ನು ಪತ್ತೆಹಚ್ಚಲು ತನಿಖೆ ಮುಂದುವರೆಸಿದ್ದಾರೆ.
ಇದನ್ನು ಓದಿ : ಗುರು ರಾಯರ ದರ್ಶನ ಬಳಿಕ ಡಿಕೆಶಿ ತುಲಾಭಾರ; ಮನದ ಹರಿಕೆ ತೀರಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್







