ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಪ್ರತಿಯಾಗಿ ರೈತರಿಂದ ಕಲ್ಲು ತೂರಾಟ!

ಬೆಳಗಾವಿ : ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಾಲ್​​ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್​​ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರಿಗೆ ರೈತರಿಂತ ಕಲ್ಲು ತೂರಾಟ ನಡೆದಿದೆ.

ದಿನೇ ದಿನೇ ತೀವ್ರಗೊಳ್ಳುತ್ತಿರುವ ಕಬ್ಬು ಬೆಳೆಗಾರರ ಹೋರಾಟದ ಭಾಗವಾಗಿ, ಇಂದು ಸಾವಿರಾರು ರೈತರು ಟ್ರ್ಯಾಕ್ಟರ್‌ಗಳ ಸಮೇತ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ (NH-48) ತಡೆದು ಪ್ರತಿಭಟನೆ ನಡೆಸಲು ಮುಂದಾದರು. ಪ್ರತಿಭಟನಾಕಾರರು ಹತ್ತರಗಿ ಟೋಲ್ ಬಳಿ ಹೆದ್ದಾರಿ ತಡೆದು, ರಸ್ತೆ ಮಧ್ಯೆ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ಸಂಚಾರಕ್ಕೆ ಅಡ್ಡಿಯಾಗಿದ್ದ ರೈತರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಸಿಗದೇ ಹೋದಾಗ ಪೊಲೀಸರು ಲಾಠಿಚಾರ್ಜ್ ಮಾಡಿದರು.

ಇದರಿಂದ ಕೆರಳಿದ ರೈತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಪೊಲೀಸ್ ವಾಹನಗಳು ಹಾಗೂ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಮತ್ತು ಖಾಸಗಿ ವಾಹನಗಳ ಮೇಲೆ ಕಲ್ಲು ತೂರಿ ಆಕ್ರೋಶ ಹೊರಹಾಕಿದ್ದಾರೆ. ವರದಿ ಮಾಡಲು ತೆರಳಿದ್ದ ಪತ್ರಕರ್ತರ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಿದೆ. ಸದ್ಯಕ್ಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯ ರೈತರ ದಾರಿ ತಪ್ಪಿಸುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ!

Btv Kannada
Author: Btv Kannada

Read More