ಬೆಂಗಳೂರು : ಬಹುನಿರೀಕ್ಷಿತ 18ನೇ ಆವೃತ್ತಿಯ ಐಪಿಎಲ್ ಟೂರ್ನಿಯ 24ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡ ಇಂದು ಮುಖಾಮುಖಿಯಾಗುತ್ತಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಆರ್‌ಸಿಬಿ ತವರು ಮೈದಾನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯ ವಹಿಸಿದೆ.
ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದ್ದು, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಹಿಂದೆಗಿಂತಲೂ ಉತ್ತಮ ಪ್ರದರ್ಶನ ತೋರುತ್ತಿದೆ. ಟೂರ್ನಿಯಲ್ಲಿ ಇದುವರೆಗೂ 4 ಪಂದ್ಯಗಳನ್ನಾಡಿರುವ ಆರ್‌ಸಿಬಿ ಮೂರು ಪಂದ್ಯಗಳನ್ನು ಗೆದ್ದಿದ್ದರೆ, ತವರಿನಲ್ಲಿ ಗುಜರಾತ್ ಟೈಟಾನ್ಸ್ ಎದುರು ಸೋಲು ಅನುಭವಿಸಿದೆ. ಆದರೆ ತವರಿನಲ್ಲಿ ಆದ ಸೋಲಿನಿಂದ ಎಚ್ಚೆತ್ತುಕೊಂಡ ಆರ್‌ಸಿಬಿ, ದಶಕದ ಬಳಿಕ ಮುಂಬೈ ಇಂಡಿಯನ್ಸ್ ತಂಡವನ್ನು ಅವರದ್ದೇ ನೆಲದಲ್ಲಿ ಮಣಿಸುವ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳುವಲ್ಲಿ ಯಶಸ್ವಿಯಾಗಿದೆ.
ಅದರಂತೆ ಇಂದು ಆರ್‌ಸಿಬಿ ತವರಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಸವಾಲಿಗೆ ಸಜ್ಜಾಗಿದೆ. ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್, ಮಾಜಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿರುವ ಆರ್‌ಸಿಬಿ, ಈ ಬಾರಿಯ ಐಪಿಎಲ್ನಲ್ಲಿ ಸೋಲನ್ನೇ ಕಾಣದೇ ಮುನ್ನುಗ್ಗುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಇಂದು ಮಹಾ ಕಾದಾಟ ನಡೆಸಲಿದೆ.
ಅಕ್ಷರ್ ಪಟೇಲ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಟೂರ್ನಿಯಲ್ಲಿ ಇದುವರೆಗೂ ಒಂದೇ ಒಂದು ಪಂದ್ಯವನ್ನು ಸೋಲದೇ ಇರುವ ಏಕೈಕ ತಂಡವಾಗಿ ಗುರುತಿಸಿಕೊಂಡಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಸತತ ಮೂರು ಪಂದ್ಯಗಳನ್ನು ಗೆದ್ದು ಬೀಗುತ್ತಿದ್ದು, ಇದೀಗ ನಾಲ್ಕನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಅದರಲ್ಲೂ ಮಿಚೆಲ್ ಸ್ಟಾರ್ಕ್, ಟ್ರಿಸ್ಟಿನ್ ಸ್ಟಬ್ಸ್, ಅಕ್ಷರ್ ಪಟೇಲ್, ಕನ್ನಡಿಗ ಕೆ.ಎಲ್ ರಾಹುಲ್ ಉತ್ತಮ ಫಾರ್ಮ್‌ನಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.
ಎಂ.ಚಿನ್ನಸ್ವಾಮಿ ಮೈದಾನದಲ್ಲಿ ಇಂದು ಉಭಯ ತಂಡಗಳು ಗೆಲುವಿಗಾಗಿ ಪೈಪೋಟಿ ನಡೆಸಲಿದ್ದು, ಸಂಜೆ 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆದು 7.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಸ್ಟಾರ್ ಸ್ಪೋರ್ಟ್ಸ್ ವಾಹಿನಿಗಳಲ್ಲಿ ಪಂದ್ಯದ ನೇರಪ್ರಸಾರ ಇರಲಿದೆ. ಇನ್ನು ಮೊಬೈಲ್ನಲ್ಲಿ ಜಿಯೋ ಆ್ಯಪ್ ಮೂಲಕ ಪಂದ್ಯವನ್ನು ನೋಡಬಹುದು.
ಇದನ್ನೂ ಓದಿ : ವಿಜಯಪುರದಲ್ಲಿ ಸರಣಿ ಅಪಘಾತ – ಬಿಎಸ್ಎಫ್ ಯೋಧ ಸೇರಿ ಇಬ್ಬರ ಸಾವು!
