ಬೆಂಗಳೂರು : ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಈ ತೀರ್ಪು ಪ್ರಶ್ನಿಸಿ ಪ್ರಜ್ವಲ್ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ವಾದ-ಪ್ರತಿವಾದ ಆಲಿಸಿದ ಬಳಿಕ ಪ್ರಜ್ವಲ್ ಜಾಮೀನು ಅರ್ಜಿಯನ್ನ ವಜಾಗೊಳಿಸಿದ್ದಾರೆ.
ಕೆಳಹಂತದ ನ್ಯಾಯಾಲಯ ಆದೇಶ ಅಮಾನತಿನಲ್ಲಿ ಇರಿಸಿ, ಜಾಮೀನು ನೀಡುವಂತೆ ಮನವಿ ಮಾಡಿದ್ದ ಪ್ರಜ್ವಲ್ ರೇವಣ್ಣ ಅವರ ಮನವಿಯನ್ನ ಹೈಕೋರ್ಟ್ ತಿರಸ್ಕರಿಸಿದೆ. ಹಾಗಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿಯಾಗಿದೆ.
ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಟಿ. ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ಡಿಸೆಂಬರ್ 3 ರಂದು ಈ ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣ ಅವರಿಗೆ ಜೈಲು ವಾಸದಿಂದ ಸದ್ಯಕ್ಕೆ ಬಿಡುಗಡೆ ಭಾಗ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಜೀವಾವಧಿ ಶಿಕ್ಷೆಯ ಹಿನ್ನೆಲೆ : ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಗಂಭೀರ ಆರೋಪದ ಮೇಲೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಳೆದ ಆಗಸ್ಟ್ 2025ರಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಘೋಷಿಸಿತ್ತು. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಅಪರಾಧ ಸಾಬೀತಾದ ಕಾರಣ, ನ್ಯಾಯಾಲಯವು ಅವರಿಗೆ ಜೀವಿತಾವಧಿ ಕಠಿಣ ಜೈಲು ಶಿಕ್ಷೆ ಮತ್ತು11 ಲಕ್ಷಕ್ಕೂ ಅಧಿಕ ದಂಡ ವಿಧಿಸಿ ಆದೇಶ ಹೊರಡಿಸಿತ್ತು. ವಿಧಿಸಲಾದ ದಂಡದ ಮೊತ್ತದಲ್ಲಿ ಬಹುಪಾಲನ್ನು ಸಂತ್ರಸ್ತೆಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿತ್ತು.
ವಿಶೇಷ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್‌ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ಬಾಕಿ ಇರುವಾಗಲೇ, ತಮಗೆ ವಿಧಿಸಲಾದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು, ಜಾಮೀನು ನೀಡುವಂತೆ ಪ್ರಜ್ವಲ್ ಪರ ಹಿರಿಯ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದರು.
ಇದನ್ನೂ ಓದಿ : ನ್ಯೂ ಇಯರ್ಗೆ ಕಿಕ್ಕೇರಿಸಲು ಇಟ್ಟಿದ್ದ 28 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ – ಇಬ್ಬರು ವಿದೇಶಿ ಪ್ರಜೆಗಳು ಅರೆಸ್ಟ್!







