ಚಿತ್ರದುರ್ಗ : ರಾಷ್ಟ್ರೀಯ ಹೆದ್ದಾರಿ 48ರ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ ಸಂಸ್ಥೆಯ ಖಾಸಗಿ ಸ್ಲೀಪರ್ ಬಸ್‌ಗೆ, ಡಿವೈಡರ್ ಹಾರಿ ಬಂದ ಕಂಟೈನರ್ ಲಾರಿಯೊಂದು ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿ ತಕ್ಷಣವೇ ಅಗ್ನಿ ಅವಘಡ ಸಂಭವಿಸಿದ್ದು, ಗಾಢ ನಿದ್ರೆಯಲ್ಲಿದ್ದ 11ಕ್ಕೂ ಹೆಚ್ಚು ಪ್ರಯಾಣಿಕರು ಹೊರಬರಲಾಗದೆ ಸಜೀವ ದಹನಗೊಂಡಿದ್ದಾರೆ. ಬೆಂಕಿಯ ಕೆನ್ನಾಲಗೆಗೆ ಇಡೀ ಬಸ್ ಸಂಪೂರ್ಣ ಭಸ್ಮವಾಗಿದೆ.

ಚಿತ್ರದುರ್ಗದ ಭೀಕರ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಅವರು ಎಕ್ಸ್ (ಟ್ವಿಟರ್) ಮೂಲಕ ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಸೂಚಿಸಲಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು ಘಟನೆಗೆ ಸಂತಾಪ ಸೂಚಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ : ಸೀಬರ್ಡ್ ಬಸ್ ದುರಂತದಲ್ಲಿ 10 ಮಂದಿ ಸಜೀವ ದಹನ – ಕೂದಲೆಳೆ ಅಂತರದಲ್ಲಿ ಪಾರಾದ ಶಾಲಾ ಮಕ್ಕಳು!







