ಬೆಂಗಳೂರು : 2026ರ ಹೊಸ ವರ್ಷದ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸುತ್ತಿದ್ದಾರೆ.
ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಹಾಗೂ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವರು ಸಮಾಲೋಚನೆ ನಡೆಸಿದರು. ಸಭೆಯಲ್ಲಿದ್ದ ಜಂಟಿ ಆಯುಕ್ತರು, ಡಿಸಿಪಿ ಹಾಗೂ ಎಸಿಪಿಗಳು ಉಪಸ್ಥಿತರಿದ್ದು, ಹೊಸ ವರ್ಷದ ಭದ್ರತಾ ರೂಪುರೇಷಗಳ ಬಗ್ಗೆ ಮಾಹಿತಿ ನೀಡಿದರು.
ಹೊಸ ವರ್ಷದ ಮುನ್ನಾದಿನ ಅಹಿತಕರ ಘಟನೆ ತಡೆಯಲು ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ ಹಾಗೂ ಇಂದಿರಾನಗರದಂತಹ ಜನದಟ್ಟಣೆ ಪ್ರದೇಶಗಳಲ್ಲಿ ಕಣ್ಗಾವಲು ಹೆಚ್ಚಿಸಲಾಗಿದೆ. ನಗರದಾದ್ಯಂತ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಹಾಗೂ ಆಯಕಟ್ಟಿನ ಜಾಗಗಳಲ್ಲಿ ಡ್ರೋನ್ ಮತ್ತು ಸಿಸಿಟಿವಿ ಮೂಲಕ ನಿಗಾ ಇಡಲು ಸೂಚಿಸಲಾಗಿದೆ.
ಬೆಂಗಳೂರು ಮಾತ್ರವಲ್ಲದೆ ಮೈಸೂರು, ಮಂಗಳೂರು ಸೇರಿ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಸುರಕ್ಷತೆಗೆ ಮೊದಲ ಆದ್ಯತೆ ನೀಡಿರುವ ಗೃಹ ಸಚಿವರು, ಸಂಭ್ರಮಾಚರಣೆ ಹೆಸರಿನಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿದ್ದಾರೆ. ಭದ್ರತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಸಂಭ್ರಮ ಸುರಕ್ಷಿತವಾಗಿರಲಿ ಎಂದು ಅಧಿಕಾರಿಗಳಿಗೆ ಕಡಕ್ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಲ್ಲಿ ಮಹಾರಾಷ್ಟ್ರ ಪೊಲೀಸರ ಮೆಗಾ ಆಪರೇಷನ್ – 55 ಕೋಟಿ ಮೌಲ್ಯದ ಡ್ರಗ್ಸ್ ಫ್ಯಾಕ್ಟರಿ ಸೀಜ್, ನಮ್ಮ ಪೊಲೀಸರು ಮಾಡಿದ್ದೇನು?







