ಮದ್ಯದ ಅಮಲಿನಲ್ಲಿ ಗೆಳೆಯನನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಸ್ನೇಹಿತ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಭೀಕರ ಹತ್ಯೆ ನಡೆದಿದೆ. ಮದ್ಯದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಣನಕುಂಟೆಯಲ್ಲಿ ಕಟ್ಟಡ ಕಾರ್ಮಿಕರಾಗಿದ್ದ ಪಶ್ಚಿಮ ಬಂಗಾಳ ಮೂಲದ ಭಗೀರಥ ಸಾಗರ್ ಹಾಗೂ ದೀಪು ಮಂಡಲ್ ನಿನ್ನೆ ರಾತ್ರಿ ಇಬ್ಬರು ಒಟ್ಟಾಗಿ ಕುಳಿತು ಪಾರ್ಟಿ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಸಣ್ಣ ವಿಷಯಕ್ಕೆ ಜಗಳ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ದೀಪು ಮಂಡಲ್ ಸನಿಹದಲ್ಲಿದ್ದ ಸುತ್ತಿಗೆಯನ್ನು ತೆಗೆದುಕೊಂಡು ಭಗೀರಥ ಸಾಗರ್ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಾಗರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಕೋಣನಕುಂಟೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೃತ್ಯದ ಬಳಿಕ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿ ದೀಪು ಮಂಡಲ್‌ನನ್ನು ಬಂಧಿಸಲಾಗಿದೆ. ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಕಂಟೇನರ್ ಲಾರಿ ಪಲ್ಟಿ – ಬಾಲಕ ಸಾವು, ಇಬ್ಬರ ಸ್ಥಿತಿ ಗಂಭೀರ!

Btv Kannada
Author: Btv Kannada

Read More