ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಳುಹಿಸಿದ್ದಾರೆ. ರಾಷ್ಟ್ರಪತಿ ದೌಪತಿ ಮುರ್ಮು ಅವರಿಗೆ ಕಳುಹಿಸಿದ ಪತ್ರದಲ್ಲಿ “ಸಂವಿಧಾನದಲ್ಲಿ ಧರ್ಮಧಾರಿತ ಮೀಸಲಾತಿ ನೀಡಲು ಅವಕಾಶವಿಲ್ಲ. ಈ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಂವಿಧಾನದ 14,15,16 ಅರ್ಟಿಕಲ್ ಉಲ್ಲೇಖಸಿ ನಿರಾಕರಣೆ ಮಾಡಿದೆ” ಎಂದು ಕೆಲ ತೀರ್ಪುಗಳನ್ನು ರಾಜ್ಯಪಾಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಗೆಹ್ಲೋಟ್ ಅವರು ಮಸೂದೆಯನ್ನು ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯ್ದಿರಿಸಿ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಗೆ ಕಳುಹಿಸಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಕೋಲಾಹಲ ಸೃಷ್ಟಿಸಿರುವ ಈ ಮಸೂದೆಯನ್ನು ಈಗ ರಾಜ್ಯ ಸರ್ಕಾರ, ಅನುಮೋದನೆ ಪಡೆಯಲು ರಾಷ್ಟ್ರಪತಿಗಳಿಗೆ ಫೈಲ್ ಅನ್ನು ಕಳುಹಿಸಲಿದೆ.
ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕಳೆದ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರ ಉಭಯ ಸದನಗಳಲ್ಲೂ ಮಸೂದೆ ಮಂಡಿಸಿ ಅಂಗೀಕರಿಸಿದೆ. ಅದರ ನಂತರ ಬಿಜೆಪಿ ಮಸೂದೆಯನ್ನು ತಿರಸ್ಕರಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿತ್ತು. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಭಾರತೀಯ ಸಂವಿಧಾನದಲ್ಲಿ ಯಾವುದೇ ಅವಕಾಶವಿಲ್ಲದ ಕಾರಣ ಮಸೂದೆ ಕಾನೂನುಬಾಹಿರ. ಆಡಳಿತಾರೂಢ ಕಾಂಗ್ರೆಸ್ “ತುಷ್ಟೀಕರಣ ರಾಜಕೀಯ”ದಲ್ಲಿ ತೊಡಗಿದೆ ಎಂದು ಬಿಜೆಪಿ ಆರೋಪಿಸಿದೆ.
ಸರ್ಕಾರದ ವಿವಿಧ ನಿರ್ಮಾಣ ಕಾಮಗಾರಿಗಳನ್ನು ಗುತ್ತಿಗೆ ನೀಡುವಾಗ ಶೇ. 4ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತ ಸಮುದಾಯದವರಿಗೆ ಕಲ್ಪಿಸುವ ವಿಧೇಯಕ ಇದಾಗಿದೆ. ಎರಡು ಕೋಟಿ ರೂ.ವರೆಗಿನ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಮೀಸಲಾತಿ ಸಿಗಲಿದೆ.
ಇದನ್ನೂ ಓದಿ : ಸ್ಟಾರ್ಕ್ ಮ್ಯಾಜಿಕ್.. ರೋಚಕ ಸೂಪರ್ ಓವರ್‌ನಲ್ಲಿ RR ವಿರುದ್ಧ ಗೆದ್ದು ಬೀಗಿದ ಡೆಲ್ಲಿ ಕ್ಯಾಪಿಟಲ್ಸ್!
