ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣ – ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್!

ಬೆಂಗಳೂರು : ವೃತ್ತಿಪರ ಕೋರ್ಸ್​​ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಕೆಲವು ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಕ್ರಮಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಅರ್ಜಿಯ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನೋಟಿಸ್ ಜಾರಿಗೊಳಿಸಿದೆ.

ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡದಿರುವುದು ಸಂವಿಧಾನಬಾಹಿರ ಎಂದು ಘೋಷಣೆ ಮಾಡುವಂತೆ ಕೋರಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎ.ಎನ್.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿದೆ.

ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್
    ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್

ಅಲ್ಲದೇ, ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ಅರ್ಜಿಯಲ್ಲಿ ಮಾಡಲಾಗಿರುವ ಆರೋಪಗಳನ್ನು ದೃಢೀಕರಿಸಬೇಕಾಗಿದೆ. ಅದಕ್ಕೆ ಸಾಕ್ಷ್ಯಗಳಾದರೂ ಏನಿದೆ. ಆದರೆ, ವಿದ್ಯಾರ್ಥಿಗಳ ವಿವರ ನೀಡಲಾಗಿಲ್ಲ ಎಂದು ಪೀಠ ಪ್ರಶ್ನೆ ಮಾಡಿದೆ. ಆರೋಪ ಗಂಭೀರವಾಗಿದ್ದು, ಇದನ್ನು ಜಾಗರೂಕತೆಯಿಂದ ವಿಚಾರಣೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಹೆಸರುಗಳ ಅಗತ್ಯವಿದೆ ಎಂದು ತಿಳಿಸಿದೆ.

ಸರ್ಕಾರದ ಪರ ವಕೀಲರ ವಾದವೇನು?: ಸರ್ಕಾರದ ಪರ ವಕೀಲರು, ”ಜನಿವಾರ ತೆಗೆಸಲು ಮುಂದಾದ ಕಾರಣದಿಂದ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆಯೂ ಸರ್ಕಾರಿ ಸೀಟು ನೀಡುವುದಕ್ಕೆ ನಿರ್ಧರಿಸಲಾಗಿದೆ. ಈ ಘಟನೆ ಉದ್ದೇಶಪೂರ್ವಕವಾಗಿ ಮಾಡಿಲ್ಲ. ಇದು ಸರ್ಕಾರಕ್ಕೂ ನೋವುಂಟು ಮಾಡಿದೆ. ತಪ್ಪಿತಸ್ಥ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಈ ಅಂಶವನ್ನು ಪೀಠಕ್ಕೆ ವಿವರಿಸಲಾಗುವುದು” ಎಂದು ತಿಳಿಸಿದರು.

ಇದನ್ನೂ ಓದಿ : ಮಂಡ್ಯದಲ್ಲಿ ಕಬಡ್ಡಿ ಪಂದ್ಯದ ವೇಳೆ ಘೋರ ದುರಂತ – ಪ್ರೇಕ್ಷಕರ ಗ್ಯಾಲರಿ ಕುಸಿದು ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

Btv Kannada
Author: Btv Kannada

Read More

Read More