ಪೋಕ್ಸೋ ಕೇಸ್​ – ಯಡಿಯೂರಪ್ಪಗೆ ಬಿಗ್ ರಿಲೀಫ್.. ನಿರೀಕ್ಷಣಾ ಜಾಮೀನು ಮಂಜೂರು!

ಧಾರವಾಡ : ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್​ ಸಿಕ್ಕಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಇದರಿಂದ ಯಡಿಯೂರಪ್ಪ ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಪ್ರಕರಣದ ಹಿನ್ನೆಲೆ : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್​ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ತನಿಕೆಯನ್ನು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

Btv Kannada
Author: Btv Kannada

Read More