ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳ ಸಂಭ್ರಮ – ಹೊಸಪೇಟೆಯಲ್ಲಿ ಇಂದು ಸಾಧನಾ ಸಮಾವೇಶ!

ವಿಜಯನಗರ : ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರದ 2 ವರ್ಷದ ಅವಧಿಯ ಸಾಧನೆ ತಿಳಿಸಲೆಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಇಂದು ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಸಾಧನಾ ಸಮಾವೇಶ ಹಿನ್ನೆಲೆ ಹೊಸಪೇಟೆಯ ಡಾ.ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ 300 ಜನ ಜನಪ್ರತಿನಿಧಿಗಳು ಕೂರಲು ಬೃಹತ್ ವೇದಿಕೆ ಹಾಕಲಾಗಿದೆ. ಸಮಾವೇಶದಲ್ಲಿ ಸಿಎ, ಡಿಸಿಎಂ ಸೇರಿದಂತೆ ಸುಮಾರು 3 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಇದಕ್ಕಾಗಿಯೇ ಕಲ್ಯಾಣ ಕರ್ನಾಟಕ ಭಾಗವೊಂದರಿಂದಲೇ ಸುಮಾರು 3,700 ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಇಂದು ನಡೆಯಲಿರುವ ಸರ್ಕಾರದ ಸಮಾವೇಶದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳಿಗೆ ಮನೆಯ ಹಕ್ಕುಪತ್ರ ವಿತರಣೆ ಮಾಡಲಾಗುತ್ತದೆ. 200 ಎಕರೆ ಪ್ರದೇಶದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 2,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಸಮಾವೇಶ ಸ್ಥಳಕ್ಕೆ ಭೇಟಿ ನೀಡಿದ್ದ ಸಿಎಂ ಇಲ್ಲಿನ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದ್ದರು. ಇದು ಸರ್ಕಾರದ ಕಾರ್ಯಕ್ರಮವಾಗಿರುವುದರಿಂದ ಎಲ್ಲರೂ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದರು.

ಸಮಾವೇಶದಲ್ಲಿ ರಾಜ್ಯದ ಒಂದು ಲಕ್ಷ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುತ್ತದೆ. ನೂರಾರು ವರ್ಷಗಳಿಂದ ಹಕ್ಕುಪತ್ರಗಳಿಂದ ವಂಚನೆಗೆ ಒಳಗಾದವರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದ್ದು, ಸರ್ಕಾರದ ಆಸ್ತಿಯನ್ನು ನೇರವಾಗಿ ತಹಸೀಲ್ದಾರರು ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಿಸಿ ಫಲಾನುಭವಿಗಳಿಗೆ ನೀಡಲಿದ್ದಾರೆ.

ಎರಡು ವರ್ಷದ ಸರ್ಕಾರದ ಸಾಧನಾ ಸಮಾವೇಶಕ್ಕೆ ವಿಜಯನಗರ ಜಿಲ್ಲೆಯ ಹೊಸಪೇಟೆ ಸಂಪೂರ್ಣ ಸಜ್ಜಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಈ ಬೃಹತ್ ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಮುಂದುವರಿದ ವರುಣಾರ್ಭಟ.. ಮನೆ, ರಸ್ತೆಗಳ ತುಂಬೆಲ್ಲಾ ನೀರೋ ನೀರು.. ಜನಜೀವನ ಅಸ್ತವ್ಯಸ್ತ!

Btv Kannada
Author: Btv Kannada

Read More