ಬೆಂಗಳೂರು : ಉಪ್ಪಿನಂಗಡಿ ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಮುಸ್ಲಿಂ ಸಮುದಾಯದ ಕುರಿತಾಗಿ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಸಲ್ಲಿಸಿರುವ ರಿಟ್ ಅರ್ಜಿಯನ್ನು ರಜಾಕಾಲದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಹರೀಶ್ ಪೂಂಜಾ ಹಾಲಿ ಶಾಸಕರು. ಇವರ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಅದನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದರೆ, ನಮಗೆ ಯಾವುದೇ ದಾಖಲೆ ನೀಡಿಲ್ಲ. ಹೀಗಾಗಿ, ಶಾಸಕರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಬೇಕು ಮತ್ತು ದೋಷಾರೋಪ ಪಟ್ಟಿಯ ಪ್ರತಿ ನೀಡಲು ಆದೇಶಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ರಾಜ್ಯ ಪ್ರಾಸಿಕ್ಯೂಷನ್ ಪರ ವಕೀಲರು, ‘ತನಿಖಾಧಿಕಾರಿ 16 ದಿನಗಳಲ್ಲಿ ಪ್ರಕರಣದ ತನಿಖೆ ಪೂರ್ಣಗೊಳಿಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿರುವ ಕಾರಣ ಎಫ್‌ಐಆರ್ ರದ್ದು ಕೋರಿ ಪೂಂಜಾ ಸಲ್ಲಿಸಿರುವ ಈ ಅರ್ಜಿಯನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಇಲ್ಲವೇ ಹೊಸ ಅರ್ಜಿ ಸಲ್ಲಿಸಬೇಕು’ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ದೂರುದಾರ ಎಸ್.ಬಿ. ಇಬ್ರಾಹಿಂ ಪರವಾಗಿ ಹಾಜರಾದ ಹಿರಿಯ ವಕೀಲ ಎಸ್. ಬಾಲನ್ ಅವರು, “ಅರ್ಜಿದಾರರು ಇದೇ ಮೊದಲ ಬಾರಿ ಈ ತರನಾದ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಹರೀಶ್ ಪೂಂಜಾ ಓರ್ವ ಹ್ಯಾಬಿಚ್ಯುವಲ್ ಅಫೆಂಡರ್. ಈ ಹಿಂದೆ ಅವರು ಏಳು ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. ಸಾರ್ವಜನಿಕವಾಗಿ ಅವರು ಬಳಕೆ ಮಾಡಿರುವ ಭಾಷೆಯನ್ನು ನೋಡಬೇಕು. ಇದೇ ಪ್ರಕರಣ ದಾಖಲಾದ ನಂತರ ಅವರು ಸರಕಾರ ಇನ್ನೂ ನೂರು ಪ್ರಕರಣ ದಾಖಲಿಸಲಿ. ಅದಕ್ಕೆ ಭಯಪಡುವುದಿಲ್ಲ ಎಂದು ಉಡಾಫೆಯಿಂದ ಬಹಿರಂಗವಾಗಿ ನುಡಿದಿದ್ದರು,” ಎಂದು ಪೀಠದ ಮುಂದೆ ವಿವರಿಸಿದರು.
“ಅರ್ಜಿದಾರರಂತಹ ವ್ಯಕ್ತಿಯ ಇಂತಹ ಕೋಮು ಪ್ರಚೋದನಕಾರಿ ಹೇಳಿಕೆಯಿಂದ ಕೊಲೆಗಳು ಹೆಚ್ಚುತ್ತಿವೆ. ಅವರು ವಿಷ ಉಗುಳುತಿದ್ದಾರೆ. ಓರ್ವ ಶಾಸಕನಾಗಿ ಕಾರ್ಯಾಂಗ, ನ್ಯಾಯಾಂಗಕ್ಕೆ ಪೂರಕವಾಗಿ ಬದುಕಬೇಕು ಎಂಬ ಕನಿಷ್ಠ ಜ್ಞಾನವೂ ಇಲ್ಲದ ಅರ್ಜಿದಾರರು ಶಿಕ್ಷೆಗೆ ಅರ್ಹವಾದ ವ್ಯಕ್ತಿಯಾಗಿದ್ದಾರೆ. ಹೀಗಾಗಿ, ರಜಾ ಕಾಲ ಮುಗಿದ ಬಳಿಕ ವಿಚಾರಣೆ ನಡೆಸಬಹುದು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗುವುದು,” ಎಂದರು. ವಾದ ಪ್ರತಿವಾದ ಆಲಿಸಿದ ಪೀಠವು, ಹರೀಶ್ ಪೂಂಜಾ ಪರ ವಕೀಲರಿಗೆ ತಿದ್ದುಪಡಿ ಅರ್ಜಿ ಸಲ್ಲಿಸಲು ಆದೇಶಿಸಿ, ವಿಚಾರಣೆಯನ್ನು ಮೇ 22ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ : ‘ಮೇ 3ರಂದು ತೆಕ್ಕಾರುವಿನ ಭಟ್ರಬೈಲಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಂಡಿದ್ದ ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ ಮಾತನಾಡುತ್ತಾ, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ ಎಂದು ಈ ಸಂಬಂಧ ತೆಕ್ಕಾರಿನ ಎಸ್.ಬಿ.ಇಬ್ರಾಹಿಂ, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮೇ 4ರಂದು ದೂರು ನೀಡಿದ್ದರು. ದೂರನ್ನು ಆಧರಿಸಿ ಶಾಸಕ ಹರೀಶ್ ಪೂಂಜಾ ವಿರುದ್ಧ ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 196 (ಧರ್ಮದ ಆಧಾರದಲ್ಲಿ ದ್ವೇಷ ಹರಡುವುದು), 353(2) (ದ್ವೇಷ ಹರಡಲು ಸುಳ್ಳು ಸುದ್ದಿ ಹಂಚಿಕೆ) ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ : ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಭಾಷಣ – ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ!
