ಬೆಂಗಳೂರು : ರಾಜ್ಯದಲ್ಲಿ ಮಳೆ ಚುರುಕುಗೊಳ್ಳಲಿದ್ದು, ಮೇ 25ರಿಂದ ಕರಾವಳಿ ಸೇರಿ 6 ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೊಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಹಾವೇರಿ, ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ವಿಜಯನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಇಂದಿನಿಂದ ರಾಜ್ಯಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗಲಿದೆ.
ಇನ್ನು ಬೆಂಗಳೂರಲ್ಲಿ ಭಾರೀ ಗಾಳಿ, ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಸೋಮವಾರ ಹಾಗೂ ಮಂಗಳವಾರ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಹೀಗಾಗಿ ಕರ್ನಾಟಕ, ಗೋವಾ, ಕೇರಳ ಹಾಗೂ ತಮಿಳುನಾಡು ಕರಾವಳಿಗೆ ಮುಂಗಾರು ಏಕಕಾಲಕ್ಕೆ ಪ್ರವೇಶಿಸಿದೆ. ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಇದನ್ನೂ ಓದಿ : ಸುಪ್ರೀಂ ಕೋರ್ಟ್ ಕೊಲಿಜಿಯಂನ ಸದಸ್ಯೆಯಾಗಿ ಕನ್ನಡತಿ ನ್ಯಾ. ಬಿ.ವಿ ನಾಗರತ್ನ ನೇಮಕ!
