ಮಂಗಳೂರು : ಮನೆ ನಿರ್ಮಾಣಕ್ಕೆ ಜಾಗದಲ್ಲಿರುವ ಕಲ್ಲು ತೆಗೆಯಲು ಅನುಮತಿಗೆ 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗಣಿ ಇಲಾಖೆಯ ಅಧಿಕಾರಿ ಮತ್ತು ಇಬ್ಬರು ಸಿಬ್ಬಂದಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿಯಾದ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ಮತ್ತು ವಾಹನ ಚಾಲಕ ಮಧು ಎಂಬುವವರನ್ನು ಬಂಧಿಸಲಾಗಿದೆ.
ದೂರುದಾರರು ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬ್ರ 279/5 ರಲ್ಲಿ 1.39 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 2024ರ ಅ.28ರಂದು ಅರ್ಜಿ ಸಲ್ಲಿಸಿದ್ದರು. ಉಳ್ಳಾಲ ತಾಲೂಕಿನ ತಹಶೀಲ್ದಾರ್ ಅವರು ಜಾಗವನ್ನು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ ಪತ್ರ ನೀಡಬೇಕು ಎಂಬುದಾಗಿ 2025ರ ಮಾ.21ರಂದು ವರದಿ ಸಲ್ಲಿಸಿದ್ದರು. ಆದರೂ ಗಣಿ ಇಲಾಖೆ ಆದಿಕಾರಿಗಳು ಅನುಮತಿ ನೀಡಿರಲಿಲ್ಲ.
ಈ ಬಗ್ಗೆ ಅರ್ಜಿಯ ಬಗ್ಗೆ ವಿಚಾರಿಸಲು ಅರ್ಜಿದಾರರು ಮಂಗಳೂರು ಗಣಿ ಇಲಾಖೆ ಕಛೇರಿಗೆ ತೆರಳಿದ್ದು, ಅಲ್ಲಿನ ಉಪನಿರ್ದೇಶಕರಾದ ಕೃಷ್ಣವೇಣಿ ರವರು ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲಿಗೆ 50,000 ರೂ. ತಗೊಳ್ಳಿ, ನಂತರ ಸೈನ್ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ರವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇಂದು ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕರಾದ ಕೃಷ್ಣವೇಣಿರವರು ಚಾಲಕ ಮಧುರವರ ಮೂಲಕ ರೂ 50,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಧಿಕಾರಿ ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಅಧೀಕ್ಷಕರಾದ ಡಾ.ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಭಾರತಿ ಜಿ., ಚಂದ್ರಶೇಖರ್ ಕೆ.ಎನ್, ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಿಯ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ, ರಾಜೇಂದ್ರ ನಾಯ್ಕ ಅವರು ಸಿಬ್ಬಂದಿ ಜೊತೆ ಸೇರಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು!
