ಮಂಗಳೂರು : ದಕ್ಷಿಣ ಕನ್ನಡದಲ್ಲಿ ಮುಂಗಾರು ಅಬ್ಬರ ಮತ್ತಷ್ಟು ಜೋರಾಗಿದ್ದು, ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.
ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೊಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ ರಕ್ಷಣೆ ಮಾಡಲಾಗಿದೆ. ಘಟನೆಯಲ್ಲಿ ಪ್ರೇಮ ಪೂಜಾರಿ (58) ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮತ್ತೊಂದೆಡೆ, ದೇರಳೆಕಟ್ಟೆಯ ಕಾನಕೆರೆಯಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದು ಬಿದ್ದು ಫಾತಿಮಾ ನಯೀಮ (12) ಎನ್ನುವ ಮಗು ಮೃತಪಟ್ಟಿದೆ. ಮೊದಲಿಗೆ ಗಂಭೀರ ಸ್ಥಿತಿಯಲ್ಲಿದ್ದ ಫಾತಿಮಾ ನಯೀಮಳನ್ನು ರಕ್ಷಣೆ ಮಾಡಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಆಕೆ ಮೃತಪಟ್ಟಿದ್ದಾಳೆ. ಅಗ್ನಿ ಶಾಮಕ ದಳ ಸಿಬ್ಬಂದಿ ಮತ್ತು ಸ್ಥಳೀಯರು ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಮಗುವನ್ನು ರಕ್ಷಣೆ ಮಾಡಿದ್ದರು.
ಸದ್ಯ ಮೋಂಟೆಪದವು ಬಳಿ ಅವಶೇಷಗಳಡಿ ಸಿಲುಕಿದವರ ರಕ್ಷಣೆಗಾಗಿ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಭಾರೀ ಮಳೆಯ ಪರಿಣಾಮ ಮಂಗಳೂರು ಸುತ್ತಮುತ್ತಲಿನ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಉಳ್ಳಾಲ, ಕಲ್ಲಾಪು, ಬಗಂಬಿಲ, ಪಿಲಾರ್, ಅಂಬಿಕಾರಸ್ತೆ, ಕೋಟೆಕಾರು, ತಲಪಾಡಿ, ಪಾವೂರು, ಹರೇಕಳ, ಉಳಿಯ ಪ್ರದೇಶಗಳು ಜಲಾವೃತವಾಗಿವೆ.
ಶಾಲೆಗಳಿಗೆ ಇಂದು ರಜೆ : ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಮೇ 30) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡದಲ್ಲಿ ಜೂನ್ 2ರವರೆಗೂ ಭಾರೀ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ‘ವಾಟರ್’ ಬೆಂಗಳೂರಿಗೆ “ಬೋಟರ್” ಯೋಜನೆ – 7 ಬೋಟ್ ಖರೀದಿಗೆ BBMP ಟೆಂಡರ್.. ಸಿಟಿ ಮಂದಿ ಆಕ್ರೋಶ!
